ಸಾರಾಂಶ
ಕಾರವಾರ : ಮೇ 20, 21ರಂದು ಕರಾವಳಿಯಲ್ಲಿ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಳೆ ಮೇ 25ರ ತನಕ ಮುಂದುವರಿಯಲಿದೆ. ಆದರೆ ಮಂಗಳವಾರ ಹಾಗೂ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ಸಹ ನೀಡಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ಹಾಗೂ ಮೀನುಗಾರರು ನದಿ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಮನೆ ಶಿಥಿಲಾವಸ್ಥೆಯಲ್ಲಿದ್ದರೆ ತಹಸೀಲ್ದಾರರಿಂದ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ವಾಸ್ತವ್ಯ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿವಿಧೆಡೆ ಮಳೆ: ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಸೋಮವಾರ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಹೊನ್ನಾವರ, ಕುಮಟಾ ಹಾಗೂ ಗೋಕರ್ಣದಲ್ಲಿ ಸುಮಾರು ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ. ಭಾರಿ ಮಳೆಯಿಂದಾಗಿ ಹೊನ್ನಾವರ ತಾಲೂಕಿನ ಕೆಲವೆಡೆ ವಿದ್ಯುತ್ ಹಾಗೂ ದೂರವಾಣಿ ವ್ಯತ್ಯಯ ಉಂಟಾಗಿದೆ. ಮೇಲಿಂದ ಮೇಲೆ ಮಳೆಯಾಗುತ್ತಿರುವುದರಿಂದ ಬಿಸಿಲಿನ ಝಳ, ಸೆಕೆಯ ತೀವ್ರತೆ ಕಡಿಮೆಯಾಗಿದೆ.