ಜೀತ ಪದ್ಧತಿ ನಿರ್ಮೂಲನೆಗೆ ಸಹಕರಿಸಿ: -ಜಿಪಂ ಸಿಇಒ ಡಾ. ಅನುರಾಧ ಕರೆ

| Published : Mar 01 2025, 01:02 AM IST

ಜೀತ ಪದ್ಧತಿ ನಿರ್ಮೂಲನೆಗೆ ಸಹಕರಿಸಿ: -ಜಿಪಂ ಸಿಇಒ ಡಾ. ಅನುರಾಧ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಹೇಳಿದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಹೇಳಿದರು.

ಬೆಂ.ಗ್ರಾ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಕುರಿತ ಒಂದು ದಿನದ ಕಾರ್ಯಾಗಾರವನ್ನು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಜೀತ ಪದ್ಧತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯ ನಂತರ ಈ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಾಮಾನ ಹಕ್ಕುಗಳನ್ನು ನೀಡಲಾಗಿದೆ. ಬಲವಂತವಾಗಿ ಯಾರ ಸ್ವತಂತ್ರವನ್ನು ಕಿತ್ತುಕೊಳ್ಳಬಾರದು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ ಎಂದು ಹೇಳಿದರು.

ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೀವಿಕ ಸಂಘಟನೆಯ ಡಾ.ನಾರಾಯಣಸ್ವಾಮಿ ಮಾತನಾಡಿ, ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ , ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಪಂ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಡಿವೈಎಸ್ಪಿ ರವಿ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 164 ಜನ ಜೀತಮುಕ್ತ:ಜಿಲ್ಲೆಯಲ್ಲಿ 164 ಜೀತದಾಳು ಗಳನ್ನು ವಿಮುಕ್ತಿಗೊಳಿಸಲಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ವಿಮುಕ್ತರಿಗೆ ತಲಾ ₹20 ಸಾವಿರಗಳಂತೆ ₹31.40 ಲಕ್ಷ ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದೆ. 43 ಜನರಿಗೆ ಮನೆ ಒದಗಿಸಲಾಗಿದೆ. 53 ಜನರಿಗೆ ಜಾಬ್ ಕಾರ್ಡ್, 156 ಜನರಿಗೆ ಆಧಾರ್ ಹಾಗೂ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ, 04 ಜನರಿಗೆ ₹79200 ಮಾಸಾಶನ ನೀಡಲಾಗಿದೆ ಎಂದು ಜಿಪಂ ಸಿಇಒ ಡಾ. ಅನುರಾಧ ಮಾಹಿತಿ ನೀಡಿದರು.