ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ: ಡಿಎಚ್‌ಒ ರಮೇಶಬಾಬು

| Published : Apr 26 2024, 12:48 AM IST

ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ: ಡಿಎಚ್‌ಒ ರಮೇಶಬಾಬು
Share this Article
  • FB
  • TW
  • Linkdin
  • Email

ಸಾರಾಂಶ

ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಲೇರಿಯಾ ರೋಗಕ್ಕೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು.

ಬಳ್ಳಾರಿ: ಮಲೇರಿಯಾ ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಮನವಿ ಮಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಏರ್ಪಡಿಸಿದ್ದ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರು ಜ್ವರ ಬಂದ ಕೂಡಲೇ ರಕ್ತ ಪರೀಕ್ಷೆ ಮಾಡಿಸಬೇಕು. ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಲೇರಿಯಾ ರೋಗಕ್ಕೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮಲೇರಿಯಾ ರೋಗದ ಲಕ್ಷಣ ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಮಲೇರಿಯಾ ಹರಡುವ ವಿಧಾನ ಹಾಗೂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಮಲೇರಿಯಾ ರೋಗ ತಡೆಗಟ್ಟಲು ನವೀನ ವಿಧಾನಗಳನ್ನು ಬಳಸಿ ಮಲೇರಿಯಾ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಮತ್ತು 2025ರ ವೇಳೆಗೆ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಮುದಾಯದ ಸಹಭಾಗಿತ್ವ ಮಹತ್ವದ್ದಾಗಿದೆ ಎಂದರು.

ಇದೇ ವೇಳೆ ಮಲೇರಿಯಾ ಜಾಗೃತಿಯ ಕುರಿತ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಜಾಗೃತಿ ಜಾಥವು ನಗರ ಪ್ರದೇಶದ ಎಲ್ಲಾ ಪ್ರಮುಖ ಬೀದಿಗಳಲ್ಲಿ ಹಾಗೂ ವಾರ್ಡ್‍ಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಲೇರಿಯಾ ರೋಗದ ಕುರಿತು ಮಾಹಿತಿ ನೀಡಲಾಯಿತು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ, ಡಾ.ಹನುಮಂತಪ್ಪ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್, ಜಿಲ್ಲಾ ಕೀಟಶಾಸ್ತ್ರಜ್ಞ ನಂದಾಕಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಕುಂತಲಾ ಮ್ಯಾಳಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅಂಬುಜಾ, ನಂದಿನಿ, ಶಕುಂತಲಾ ಸೇರಿದಂತೆ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು, ವಿಬಿಡಿಸಿ ಸಿಬ್ಬಂದಿ ವರ್ಗದವರು, ತಾಲೂಕು ಆರೋಗ್ಯಾಧಿಕಾರಿಗಳ ಸಿಬ್ಬಂದಿ ಮತ್ತು ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಸಿಬ್ಬಂದಿಗಳು ಜಾಥಾದಲ್ಲಿ ಭಾಗವಹಿಸಿದ್ದರು.