ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರೆಯುವುದೇ ಅಪರೂಪ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

44 ಕೊಠಡಿಗಳ ನಿರ್ಮಾಣಕ್ಕೆ ₹17 ಕೋಟಿ ಮಂಜೂರು

ಅನುದಾನವಿದ್ದರೂ ನಾಲ್ಕು ತಿಂಗಳಿಂದ ಟೆಂಡರ್ ಪ್ರಕ್ರಿಯೆಯೇ ಆರಂಭವಾಗಿಲ್ಲ

ಸೋಮರಡ್ಡಿ ಅಳವಂಡಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರೆಯುವುದೇ ಅಪರೂಪ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಶಿಥಿಲಗೊಂಡ ಕೊಠಡಿಗಳ ಪುನರ್ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆ ಕೋಟ್ಯಂತರ ರುಪಾಯಿ ಅನುದಾನ ಮಂಜೂರು ಮಾಡಿದ್ದರೂ, ಕಾಮಗಾರಿ ಆರಂಭಿಸಲು ಅಗತ್ಯ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲಾ ಕೊಠಡಿಗಳ ಮಾಹಿತಿ ಸಂಗ್ರಹಿಸಿ, ತುರ್ತು ಅಗತ್ಯವಿರುವ ಶಾಲೆಗಳಲ್ಲಿ ಹೊಸ ಕೊಠಡಿಗಳನ್ನು ನಿರ್ಮಿಸಲು ಶಿಕ್ಷಣ ಇಲಾಖೆ ಅನುದಾನ ಬಿಡುಗಡೆ ಮಾಡಿದೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿಯೂ ತುರ್ತಾಗಿ ಅಗತ್ಯವಿರುವ 44 ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ಒಟ್ಟು ₹17 ಕೋಟಿ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಇದಕ್ಕಾಗಿ ಈಗಾಗಲೇ ಆಗಸ್ಟ್ ತಿಂಗಳಲ್ಲಿ ₹9.60 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಆದರೆ, ಅನುದಾನ ಬಿಡುಗಡೆಯಾಗಿ ನಾಲ್ಕು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯೇ ಆರಂಭವಾಗಿಲ್ಲ. ಇದರಿಂದ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆ ವಿಳಂಬವಾಗುತ್ತಿದ್ದು, ಸರ್ಕಾರದ ಉದ್ದೇಶವೇ ಈಡೇರದಂತಾಗಿದೆ.

ಜಿಲ್ಲೆಯ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಹೆಚ್ಚುವರಿ ತರಗತಿಗಳನ್ನು ಆರಂಭಿಸಲಾಗಿದೆ. ಮತ್ತೊಂದೆಡೆ, ಈಗಾಗಲೇ ಶಿಥಿಲಗೊಂಡಿರುವ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಕಲಿಯುವ ಪರಿಸ್ಥಿತಿ ಇದೆ. ಇಂತಹ ಶಾಲೆಗಳಿಗೆ ತುರ್ತಾಗಿ ಹೊಸ ಕೊಠಡಿಗಳನ್ನು ನಿರ್ಮಿಸಿಕೊಡುವ ಉದ್ದೇಶದಿಂದ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ, ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಶಿಕ್ಷಣ ಪ್ರೇಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಯೋಜನೆಯ ರೂಪುರೇಷೆ ಸಿದ್ಧಗೊಂಡಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ಮಾಣ ಕಾರ್ಯಕ್ಕೆ ಅನುಮತಿ ನೀಡಿದ ಬಳಿಕ ಟೆಂಡರ್ ಪ್ರಕ್ರಿಯೆ ಆರಂಭವಾಗಬೇಕಿದೆ. ಆದರೆ, ನಾಲ್ಕು ತಿಂಗಳಿನಿಂದ ಈ ಪ್ರಕ್ರಿಯೆ ಮುಂದುವರಿಯದಿರುವುದು ಯೋಜನೆ ಅನುಷ್ಠಾನಕ್ಕೆ ಅಡ್ಡಿಯಾಗಿದೆ.

ನೋಟಿಸ್ ಜಾರಿ:

ಶಾಲಾ ಕೊಠಡಿಗಳ ನಿರ್ಮಾಣ ಯೋಜನೆ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ಈ ಕುರಿತು ಡಿಡಿಪಿಐಗಳಿಗೆ ನವೆಂಬರ್ ತಿಂಗಳಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಕೂಡಲೇ ಮಂಜೂರಾದ ಅನುದಾನವನ್ನು ಬಳಕೆ ಮಾಡಿಕೊಂಡು ಶಾಲಾ ಕೊಠಡಿಗಳ ನಿರ್ಮಾಣ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಯೋಜನೆ ಸಿದ್ಧಪಡಿಸಿ ಅನುಷ್ಠಾನಕ್ಕೆ ಪ್ರಯತ್ನಿಸಿದ್ದರೂ, ಜಿಲ್ಲಾ ಪಂಚಾಯಿತಿಯಲ್ಲಿನ ಆಡಳಿತಾತ್ಮಕ ವಿಳಂಬದಿಂದಾಗಿ ಕಾಮಗಾರಿ ಪ್ರಕ್ರಿಯೆ ಆರಂಭವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಅನುದಾನವಿದ್ದರೂ ನಿರ್ಮಾಣ ಕಾರ್ಯಕ್ಕೆ ಮುಂದಾಗದಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಸಾಮಾನ್ಯವಾಗಿ ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಯೋಜನೆಗಳು ನನೆಗುದಿಗೆ ಬೀಳುವುದು ಸಹಜ. ಆದರೆ, ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ಆರಂಭವಾಗದಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.