ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ದೇಶದ ಕೀರ್ತಿಗೆ ಬಳಸಿಕೊಳ್ಳುವ ಸಂಕಲ್ಪವನ್ನು ಕ್ರೀಡಾಪಟುಗಳು ಹೊಂದಬೇಕು. ನಿರಂತರ ತರಬೇತಿ ಹಾಗೂ ಕಠಿಣ ಪರಿಶ್ರಮದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಗಮನಹರಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಶಿಕ್ಷಣದಷ್ಟೇ ಕ್ರೀಡೆಯು ಯುವ ಜನತೆಯ ಸರ್ವತೋಮುಖ ಬೆಳವಣಿಗೆಗೆ ಮಹತ್ವದ್ದಾಗಿದೆ. ನಿರಂತರ ಅಭ್ಯಾಸ, ಶಿಸ್ತು ಮತ್ತು ಪರಿಶ್ರಮದಿಂದ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಹೇಳಿದರು.ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಕ್ಷೇತ್ರದಲ್ಲಿ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳಿವೆ. ಕ್ರೀಡೆಗಳಿಂದ ದೈಹಿಕ ಸದೃಢತೆ ಜೊತೆಗೆ ಮನಸ್ಸು ಹಾಗೂ ಬುದ್ಧಿ ಚುರುಕಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ದೇಶದ ಕೀರ್ತಿಗೆ ಬಳಸಿಕೊಳ್ಳುವ ಸಂಕಲ್ಪವನ್ನು ಕ್ರೀಡಾಪಟುಗಳು ಹೊಂದಬೇಕು. ನಿರಂತರ ತರಬೇತಿ ಹಾಗೂ ಕಠಿಣ ಪರಿಶ್ರಮದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾತನಾಡಿ, ನವರಾತ್ರಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಕ್ರೀಡಾಕೂಟಗಳನ್ನು ಆಯೋಜಿಸುವುದು ನಮ್ಮ ನಾಡಿನ ಪರಂಪರೆಯಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ದಸರಾ ಕ್ರೀಡಾಕೂಟ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವೈ.ಸಿ. ಮನುಜಶ್ರೀ ಮಾತನಾಡಿ, ಜಿಲ್ಲೆಯ ಏಳು ತಾಲೂಕುಗಳಲ್ಲಿ ಈಗಾಗಲೇ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆದಿವೆ. ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಅರ್ಹ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ ಎಂದರು.
ಈ ಕ್ರೀಡಾಕೂಟಕ್ಕೆ ಈಗಾಗಲೇ 4 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡಿದ್ದಾರೆ. ಜೂಡೋ, ಹಾಕಿ, ಟೇಕ್ವಾಂಡೋ, ಕರಾಟೆ, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್ ಹಾಗೂ ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳಲ್ಲಿ ನಡೆಯುತ್ತಿವೆ ಎಂದರು.ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಕ ಹೂವಯ್ಯ, ಯೋಗ ಗುರುಗಳಾದ ಶಿವರುದ್ರಪ್ಪ, ಅಪ್ಪಾಜಿ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.