ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ

| Published : May 15 2025, 01:34 AM IST

ಸಾರಾಂಶ

ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧತೆ ಆರಂಭಿಸಿ ಯಶಸ್ಸು ಗಳಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮನೋವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ದಯಾನಂದ ಸಾಗರ್ ಹೇಳಿದರು.

ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧತೆ ಆರಂಭಿಸಿ ಯಶಸ್ಸು ಗಳಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮನೋವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ದಯಾನಂದ ಸಾಗರ್ ಹೇಳಿದರು.ನಗರದ ಕುವೆಂಪು ರಂಗಮಂದಿರದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ಮತ್ತು ಸಂಸ್ಥೆಯು ಉತ್ತಮವಾಗಿ ಅಭಿವೃದ್ಧಿ ಹೊಂದಲು ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ನಡೆಸಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಜೀವನದಲ್ಲಿ ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿರಬೇಕು. ಹಂತ ಹಂತವಾಗಿ ಗುರಿ ಕಡೆಗೆ ಹೆಜ್ಜೆ ಇಡಬೇಕು. ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ. ಸಾಧನೆಯ ಜತೆಯಲ್ಲಿ ಸಮಾಜದ ಪ್ರಗತಿಗೆ ಕೈಜೋಡಿಸಬೇಕು ಎಂದರು.

ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವದಿಂದ ಕಾಣಬೇಕು. ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ವೆಂಕಟೇಶ್ ಮಾತನಾಡಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಡಾ.ದಯಾನಂದ ಸಾಗರ್ ಅವರು ವಿದ್ಯಾರ್ಥಿಗಳಿಗೆ ಮಾದರಿ. ಸಾಧಕರ ಜೀವನಶೈಲಿ ಅರಿತುಕೊಂಡು ನಿಮ್ಮ ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಾ.ದಯಾನಂದ ಸಾಗರ್ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಬರಲು ನಡೆಸಿದ ಸಿದ್ಧತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಸಚಿನ್.ಕೆ, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಕೇತನಾ ಆರ್ತಿ, ವಿದ್ಯಾರ್ಥಿ ಕ್ಷೇಮ ಪಾಲಕಿ ಪ್ರೊ. ಎಸ್.ಕೆ.ಸಾವಿತ್ರಿ ಉಪಸ್ಥಿತರಿದ್ದರು.