ಹಾವೇರಿ ಜಿಲ್ಲಾದ್ಯಂತ ಹೈ ಅಲರ್ಟ್‌, ಜನದಟ್ಟಣೆ ಪ್ರದೇಶದಲ್ಲಿ ತಪಾಸಣೆ

| Published : Nov 12 2025, 02:30 AM IST

ಸಾರಾಂಶ

ದೆಹಲಿ ಕೆಂಪುಕೋಟೆ ಬಳಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳವಾರ ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.

ಹಾವೇರಿ:ದೆಹಲಿ ಕೆಂಪುಕೋಟೆ ಬಳಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳವಾರ ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.ಮಂಗಳವಾರ ಬೆಳಗ್ಗೆಯಿಂದಲೇ ಪೊಲೀಸರು ಶ್ವಾನ ದಳದೊಂದಿಗೆ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಡಿಸಿ ಕಚೇರಿ, ಮಾರುಕಟ್ಟೆ ಸೇರಿದಂತೆ ಪ್ರಮುಖ ಜನ ನಿಬಿಡ ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಿದರು. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ರಾಣಿಬೆನ್ನೂರು, ಹಾನಗಲ್ಲ, ಶಿಗ್ಗಾಂವಿ ಮೊದಲಾಗಿ ನಗರ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿಯೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಎಸ್‌ಪಿ, ಅಡಿಷನಲ್ ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವತಃ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲೆಯಾದ್ಯಂತ ಸಂಚರಿಸಿ ಬಂದೊಬಸ್ತ್ ಮತ್ತು ತಪಾಸಣೆ ವೀಕ್ಷಿಸಿ ನಿರ್ದೇಶನ ನೀಡಿದರು.ಜಿಲ್ಲಾದ್ಯಂತ ಪ್ರಮುಖ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ವಾನ ದಳದಿಂದ ತಪಾಸಣೆ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವ್ಯಕ್ತಿಗಳು, ವಸ್ತುಗಳು ಕಂಡು ಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹಾವೇರಿ ಎಡಿಶನಲ್‌ ಎಸ್ಪಿ ಲಕ್ಷ್ಮಣ ಶಿರಕೋಳ ಹೇಳಿದರು.