ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಉಪಾಹಾರ, ಊಟವನ್ನು ಮಾಡಿದ್ದಾರೆ. ಅದರಲ್ಲಿ ತಪ್ಪೇನು? ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ತಿಳಿಸಿದ್ದಾರೆ.

ಹುಬ್ಬಳ್ಳಿ:

ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್ ಸೂಚಿಸಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಉಪಾಹಾರ, ಊಟವನ್ನು ಮಾಡಿದ್ದಾರೆ. ಅದರಲ್ಲಿ ತಪ್ಪೇನು? ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲರಲ್ಲೂ ಹೊಂದಾಣಿಕೆ ಇದೆ. ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅಧಿಕಾರ ಸಿಗುತ್ತದೆ ಎಂದರೆ ಯಾರೂ ಬೇಡ ಎನ್ನುವುದಿಲ್ಲ. ಎಲ್ಲರಿಗೂ ಅಧಿಕಾರ ಬೇಕು. ಹಾಗೆಯೇ ನನಗೂ ಸಚಿವ ಸ್ಥಾನದ ಆಸೆಯಿದೆ. ನೀಡಿದರೆ ಉತ್ತಮವಾಗಿ ನಿಭಾಯಿಸಿ ತೋರಿಸುತ್ತೇನೆ. ಆದರೆ, ಇದನ್ನೆಲ್ಲ ನಿರ್ಧರಿಸುವುದು ಹೈಕಮಾಂಡ್. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.ಜಾತಕ ಪಕ್ಷಿಯಂತೆ:

ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಈ ಭಾಗದ ಜನತೆ ಹಾಗೂ ನಾನು ಜಾತಕ ಪಕ್ಷಿಯಂತೆ ಕಾಯುತ್ತಿರುವೆ. ವನ್ಯಜೀವಿ ಮಂಡಳಿಯ ಅನುಮತಿಯೊಂದು ಬಾಕಿಯಿದೆ. ಈ ಕುರಿತು ಈಚೆಗೆ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಈ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ್ದೇನೆ. ಜತೆಗೆ ಈ ಚಳಿಗಾಲದ ಅಧಿನೇಶನದಲ್ಲಿ ಈ ಯೋಜನೆ ಜಾರಿಗೆ ಸರ್ವಪಕ್ಷಗಳೊಂದಿಗೆ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ತಿಳಿಸಿದರು.