ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ನಿಖಿಲ್ ಕುಮಾರಸ್ವಾಮಿ

| Published : Sep 07 2024, 01:30 AM IST

ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ನಿಖಿಲ್ ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು । ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಲಿ

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ.ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಯುವಕರಿಗೆ ಗೌರಿ- ಗಣೇಶ ಮೂರ್ತಿಯನ್ನು ವಿತರಿಸಿ, ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಟಿಕೆಟ್ ವಿಚಾರವನ್ನು ಎರಡೂ ಪಕ್ಷಗಳ ಚೌಕಟ್ಟಿನೊಳಗೆ ಕುಳಿತು ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. ಈ ಕುರಿತು ಬಹಿರಂಗವಾಗಿ ಹೇಳಿಕೆ ನೀಡುವುದು ಸೂಕ್ತವಲ್ಲ. ಪಕ್ಷದ ಕಾರ್ಯಕರ್ತರ ಜತೆ ಬೆರೆಯುವ ಕೆಲಸ ಮಾಡುತ್ತಿದ್ದೇನೆ. ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಬಹುದೇ ಹೊರತು, ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲು ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆರೋಗ್ಯಕರ ಚುನಾವಣೆ ನಡೆಯಬೇಕು: ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು, ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಜೆಪಿಯ ಹಿರಿಯ ವರಿಷ್ಠರ ಜತೆಗೂ ಕೂಡ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು. ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಅನ್ನು ಸೋಲಿಸಲು ಸೂಕ್ತ ಅಭ್ಯರ್ಥಿ:

ಒಟ್ಟಿನಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಸೂಕ್ತ ಅಭ್ಯರ್ಥಿ ಹಾಕುವ ಕೆಲಸವನ್ನು ಹೈಕಮಾಂಡ್ ಮಾಡಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಜೆಡಿಎಸ್ ತಾಲೂಕು ಅಧ್ಯಕ್ಷ ಜಯಮುತ್ತು ಅವರು ಉಚಿತ ಗಣೇಶ ಮೂರ್ತಿಗಳನ್ನು ವಿತರಣೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ನಾನೂ ಭಾಗವಹಿಸಿ ಯುವಕರಿಗೆ ಗಣೇಶ ಮೂರ್ತಿಗಳನ್ನು ವಿತರಿಸುತ್ತಿದ್ದೇನೆ ಎಂದು ತಿಳಿಸಿದರು.

ನಾಡಿನ ಸಮಸ್ತ ಜನತೆಗೆ ಗೌರಿ- ಗಣೇಶ ಹಬ್ಬದ ಹಾರ್ಧಿಕ ಶುಭ ತರಲಿ. ನಮ್ಮ ರಾಜ್ಯದ ರೈತಾಪಿ ವರ್ಗಕ್ಕೆ ಮಳೆ- ಬೆಳೆ ಆಗಲಿ, ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಗಲಿ, ಜತೆಗೆ ಇಡೀ ರಾಜ್ಯದ ಜನತೆಗೆ ಅರೋಗ್ಯ, ಆಯಸ್ಸು, ನೆಮ್ಮದಿ ಕಲ್ಪಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‌ಕಾಮ್ಸ್ ದೇವರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬೋರ್‌ವೆಲ್ ರಾಮಚಂದ್ರು ಮುಂತಾದವರು ಇದ್ದರು.