ಸಾರಾಂಶ
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದ್ದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ಖಾಸಗಿ ದೂರು ದಾಖಲಾತಿಗೆ ಮತ್ತು ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದು ಕೋರಿ ಇಂಧನ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು, ‘ಅರ್ಜಿದಾರರು ಸೇರಿ ಪ್ರಕರಣದ ಇತರೆ ಆರೋಪಿಗಳು ಸಾರ್ವಜನಿಕ ಸೇವಕರಾಗಿದ್ದಾರೆ. ಆರೋಪಿತರಿಗಿಂತ ಮೇಲಿನ ಶ್ರೇಣಿಯಲ್ಲಿರುವವರಿಂದ ತನಿಖಾ ವರದಿ ಪಡೆಯಬೇಕಿದೆ. ಆದರೆ, ಮೇಲಿನ ಶ್ರೇಣಿಯ ಅಧಿಕಾರಿ ಬದಲಿಗೆ ಪೊಲೀಸ್ ಅಧಿಕಾರಿಯಿಂದ ವಿಶೇಷ ನ್ಯಾಯಾಲಯ ವರದಿ ಕೇಳಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 17ಎ ಅಡಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸೇವಕರ ವಿರುದ್ಧ ಯಾವುದೇ ಪೊಲೀಸ್ ಅಧಿಕಾರಿ ತನಿಖೆ ನಡೆಸುವಂತಿಲ್ಲ. ಆದರೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಸಲ್ಲಿಸಿದ ಖಾಸಗಿ ದೂರು ಆಧರಿಸಿ ವಿಚಾರಣಾ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಂದ ವರದಿ ಕೇಳಿರುವುದು ಕಾನೂನು ಬಾಹಿರ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಖಾಸಗಿ ದೂರುದಾರಾಗಿರುವ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಪರ ವಕೀಲರು, ವಿಶೇಷ ನ್ಯಾಯಾಲಯವು ವರದಿ ನೀಡುವಂತೆ ಆದೇಶಿಸಿದೆಯಷ್ಟೆ. ಇದು ಇನ್ನೂ ಪ್ರಾಥಮಿಕ ಹಂತದ ಪ್ರಕ್ರಿಯೆ. ಹಾಗಾಗಿ, ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬಾರದು ಎಂದು ಕೋರಿದರು. ಇದಕ್ಕೆ ಕೋರ್ಟ್ ಒಪ್ಪಲಿಲ್ಲ.
ಪ್ರಕರಣದ ಹಿನ್ನೆಲೆ:
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಕಾನೂನು ಬಾಹಿರ. ಈ ಟೆಂಡರ್ ನೀಡಿಕೆಯಿಂದ ಅಂದಾಜು 16 ಸಾವಿರ ಕೋಟಿ ರು. ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಇಂಧನ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಿದ್ದರು. ಆ ದೂರು ಪರಿಗಣಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಿತ್ತು.
ನಮ್ಮಲ್ಲೂ ತ.ನಾಡು ಮಾದರಿ: ಕೋರ್ಟ್ ಚಟಾಕಿ
ವಿಚಾರಣೆ ವೇಳೆ ಅರ್ಜಿ ಪರಿಶೀಲಿಸಿದ ನ್ಯಾಯಪೀಠ, ಒಂದು ರಾಜಕೀಯ ಪಕ್ಷದ ವಿರುದ್ಧ ಮತ್ತೊಂದು ರಾಜಕೀಯ ಪಕ್ಷ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಂಸ್ಕೃತಿ ತಮಿಳುನಾಡಿನಲ್ಲಿ ಇದ್ದಂತೆ ಕಾಣುತ್ತದೆ. ಈಗ ನಮ್ಮ ರಾಜ್ಯವೂ ಅದನ್ನು ನಕಲು ಮಾಡಿದಂತಿದೆ. ಒಂದು ಬಾರಿ ಇವರು, ಇನ್ನೊಂದು ಬಾರಿ ಅವರು ಅಧಿಕಾರದಲ್ಲಿರುತ್ತಾರೆ ಎಂದು ಲಘು ದಾಟಿಯಲ್ಲಿ ಹೇಳಿತು.