ನೂತನ ನರ್ಸಿಂಗ್ ಕೋರ್ಸ್ ಆರಂಭ ಬಹು ದಿನಗಳ ಕನಸಾಗಿದ್ದು, ಈ ವೃತ್ತಿಗೆ ದೇಶ ಹಾಗೂ ವಿದೇಶಗಳಲ್ಲಿ ಉತ್ತಮ ಬೇಡಿಕೆಯಿದೆ. ನರ್ಸಿಂಗ್ ಶಿಕ್ಷಣದ ಆರಂಭ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವಿಸ್ತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಬೆಳ್ತಂಗಡಿ: ನೂತನ ನರ್ಸಿಂಗ್ ಕೋರ್ಸ್ ಆರಂಭ ಬಹು ದಿನಗಳ ಕನಸಾಗಿದ್ದು, ಈ ವೃತ್ತಿಗೆ ದೇಶ ಹಾಗೂ ವಿದೇಶಗಳಲ್ಲಿ ಉತ್ತಮ ಬೇಡಿಕೆಯಿದೆ. ನರ್ಸಿಂಗ್ ಶಿಕ್ಷಣದ ಆರಂಭ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವಿಸ್ತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೈಗೆಟುಕುವ ರೀತಿಯಲ್ಲಿ ಒದಗಿಸುವ ಉದ್ದೇಶ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ 57ನೇ ಸಂಸ್ಥೆಯಾಗಿ ಎಸ್ಡಿಎಂ ಕಾಲೇಜು ಆಫ್ ನರ್ಸಿಂಗ್ನ ನೂತನ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ನ ತರಗತಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಧಾರವಾಡದಲ್ಲಿರುವ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಉಜಿರೆಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆ, ಹಾಸನ ಮತ್ತು ಉಡುಪಿಯ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗಳು ಆರೋಗ್ಯ ಸೇವೆಯಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳ ಸಾಲಿಗೆ ನರ್ಸಿಂಗ್ ಕಾಲೇಜು ಸೇರ್ಪಡೆಯಾಗಿರುವುದು ಸಂತಸದ ಸಂಗತಿ ಎಂದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಎಂ ಹಾಗೂ ನರ್ಸಿಂಗ್ ಕಾಲೇಜಿನ ನೂತನ ಪ್ರಾಚಾರ್ಯ ಉಪಸ್ಥಿತರಿದ್ದರು. ಬೆಳಗ್ಗೆ ಗಣಹೋಮ ಧಾರ್ಮಿಕ ವಿಧಿ ನಡೆಯಿತು.ಕಾರ್ಯಕ್ರಮದಲ್ಲಿ ಸೋನಿಯಾ ಯಶೋವರ್ಮ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವರ್ಮ, ಆಡಳಿತ ಮಂಡಳಿ ಸದಸ್ಯರಾದ ಡಾ. ಬಿ. ಪ್ರಕಾಶ್, ರಾಜೇಶ್ ಪೈ, ಭಾಸ್ಕರ್ ಪೈ, ಎಸ್ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಾತ್ವಿಕ್ ಜೈನ್, ವಿವಿಧ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕನ್ನಡ ಉಪನ್ಯಾಸಕ ಡಾ. ದಿವಾಕರ ಕೊಕ್ಕಡ ನಿರೂಪಿಸಿದರು.
ಪ್ರಾಯೋಗಿಕ ತರಬೇತಿಎಸ್.ಡಿ.ಎಂ ಕಾಲೇಜು ಆಫ್ ನರ್ಸಿಂಗ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯೋಜನೆ ಹೊಂದಿದ್ದು, ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಮಾನ್ಯತೆ ಹಾಗೂ ಕರ್ನಾಟಕ ಸರ್ಕಾರದ ಅನುಮೋದನೆ ಪಡೆದಿದೆ. ನಾಲ್ಕು ವರ್ಷಗಳ ಬಿ.ಎಸ್ಸಿ. ನರ್ಸಿಂಗ್ ಪದವಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಬೋಧನೆಯ ಜೊತೆಗೆ ಆಸ್ಪತ್ರೆಗಳಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಕ್ಲಿನಿಕಲ್ ಅನುಭವ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಉಜಿರೆಯ ಎಸ್ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ವಿದ್ಯಾರ್ಥಿಗಳ ಕ್ಲಿನಿಕಲ್ ತರಬೇತಿಗೆ ಪ್ರಮುಖ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಲಿದೆ.