ಸಾರಾಂಶ
ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.
ಮೈಸೂರು : ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.
ಅರಮನೆ ಆವರಣದಲ್ಲಿ ಭಾನುವಾರ ಸಂಜೆ ದಸರಾ ಆನೆಗಳನ್ನು ಸ್ವಾಗತ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವ ಆಚರಣೆ ಸಂಬಂಧ ಅಧಿಕಾರಿಗಳ ಸಭೆ ಮಾಡಿ, ದಸರಾ ಯಶಸ್ವಿಯಾಗಿ ನಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.
ಈ ಬಾರಿಯೂ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಇರುತ್ತದೆ. 3- 4 ವಾರಗಳ ಮುಂಚಿತವಾಗಿಯೇ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲು ಸೂಚಿಸಿದ್ದೇವೆ. ಡ್ರೋನ್ ಶೋ ಟಿಕೆಟ್ 3 ಸಾವಿರ ನಿಗದಿ ಮಾಡಲಾಗಿದೆ. ಈ ಬಾರಿ ದಸರಾ ಏರ್ ಶೋ ಇರುತ್ತದೆ ಎಂದು ಅವರು ಹೇಳಿದರು.
ಗಾಂಧಿ ಜಯಂತಿ ದಿನವೇ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಹೀಗಾಗಿ, ಗಾಂಧಿಜಿಯವರ ಸಂದೇಶ ಸಾರುವಂತಹ ದಸರಾ ಆಗಲಿದೆ ಎಂದರು.
ದಸರಾ ಉದ್ಘಾಟಕರ ಆಯ್ಕೆಯನ್ನು ಮುಖ್ಯಮಂತ್ರಿಗೆ ಬಿಟ್ಟಿದ್ದೇವೆ. ಅಂತಿಮವಾಗಿ ಸಿಎಂ ಅವರೇ ದಸರಾ ಉದ್ಘಾಟಕರನ್ನು ಆಯ್ಕೆ ಮಾಡುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.
ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಇನ್ನೂ ಮೂರು ದಸರಾಗಳನ್ನು ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡುತ್ತಾರೆ ಎಂದರು.