ಸಾರಾಂಶ
ಬೆಂಗಳೂರು : ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಂಗಳೂರು ಎಸಿಎಂಎಂ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಹಲಸೂರು ನಿವಾಸಿಗಳಾದ ಪುರುಷೋತ್ತಮ್ ಮತ್ತವರ ಪತ್ನಿ ಭಾಗ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಹಲಸೂರು ಠಾಣಾ ಪೊಲೀಸರು ಮತ್ತು ಪ್ರಕರಣದ ದೂರುದಾರರಾಗಿರುವ ಅರ್ಜಿದಾರ ಪುರುಷೋತ್ತಮ್ ಅವರ ಸಹೋದರಿ ಭುವನೇಶ್ವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು. ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತಲ್ಲದೆ, ಪ್ರತಿವಾದಿಗಳು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿತು.
ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೂರುದಾರರು ದೂರಿನಲ್ಲಿಯೇ ಅರ್ಜಿದಾರರ ಮನೆಯಲ್ಲಿ ನಾಯಿಯನ್ನು ಕಟ್ಟಿಹಾಕಲಾಗಿತ್ತು ಎಂಬುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಹಾಗಾದರೆ ಕಟ್ಟಿದ ನಾಯಿಯನ್ನು ಯಾರು ಬಿಟ್ಟರು ಎಂದು ಪ್ರಶ್ನಿಸಿದರು.
ಅರ್ಜಿದಾರರ ಪರ ವಕೀಲರು ಉತ್ತರಿಸಿ, ನಾಯಿಯನ್ನು ಯಾರು ಬಿಟ್ಟಿಲ್ಲ. ವಾಸ್ತವವಾಗಿ ಎರಡನೇ ಅರ್ಜಿದಾರರು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು. ಅದಕ್ಕೆ ದೂರುದಾರರು ಅರ್ಜಿದಾರರ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ. ಮೊದಲಿಗೆ ಅರ್ಜಿದಾರರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಿಸಲಾಗಿತ್ತು. ನಂತರ ಅಕ್ರಮ ಪ್ರತಿಬಂಧಕ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.
ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಮೊದಲನೇ ಅರ್ಜಿದಾರರು ಮತ್ತು ದೂರುದಾರರು ಅಣ್ಣ-ತಂಗಿಯಾಗಿದ್ದಾರೆ. ಈ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅರ್ಜಿದಾರರ ಪರ ವಕೀಲ ಉತ್ತರಿಸಿ, ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪ್ರಕರಣವನ್ನು ಲೋಕ ಅದಾಲತ್‌ಗೆ ಶಿಫಾರಸು ಆಗಿತ್ತು. ಆದರೆ, ಅದಾಲತ್‌ಗೆ ದೂರುದಾರರೇ ಹಾಜರಾಗಲಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ಕುರಿತು ಎಸಿಎಂಎಂ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿತು.