ರಾಜ್ಯ ರೈತ ಸಂಘ ಹಾಗೂ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ನೇತೃತ್ವದಲ್ಲಿ ಹಿಟ್ನಾಳ ಬಳಿ ಹೆದ್ದಾರಿಯಲ್ಲಿ ಜಮಾಯಿಸಿದ ರೈತರು ಸುಮಾರು ಮೂರು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ
ಕೊಪ್ಪಳ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು, ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮಂಗಳವಾರ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತ ಮಹಿಳೆಯೋರ್ವಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.
ರಾಜ್ಯ ರೈತ ಸಂಘ ಹಾಗೂ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ನೇತೃತ್ವದಲ್ಲಿ ಹಿಟ್ನಾಳ ಬಳಿ ಹೆದ್ದಾರಿಯಲ್ಲಿ ಜಮಾಯಿಸಿದ ರೈತರು ಸುಮಾರು ಮೂರು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದು ಅಲ್ಲದೆ, ತಲೆಯ ಮೇಲೆ ಕಲ್ಲು ಹೊತ್ತು, ಕಿವಿಯಲ್ಲಿ ಹೂವಿಟ್ಟು, ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿದರು.ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ನಡೆದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಜೋರಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಹಿಟ್ನಾಳ ಟೋಲ್ ಪ್ಲಾಜಾ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಜಾರಿ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿತ್ತು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಮಾತುಕತೆ ವಿಫಲವಾಗಿರುವುದು ಹೋರಾಟಗಾರರ ಅಸಮಾಧಾನಕ್ಕೆ ಕಾರಣವಾಯಿತು.ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ: ಪ್ರತಿಭಟನೆ ತೀವ್ರಗೊಂಡಿದ್ದ ಸಂದರ್ಭದಲ್ಲಿ ಹಿಟ್ನಾಳ ಟೋಲ್ ಗೇಟ್ ಬಳಿ ರೈತ ಮಹಿಳೆ ರತ್ನಮ್ಮ ಕಮಲಾಪೂರ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿತು.
ರೈತರ ಬೇಡಿಕೆಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ರತ್ನಮ್ಮ ಅವರು, ಅಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಳ್ಳಲು ಯತ್ನಿಸಿದರು. ಇದನ್ನು ಗಮನಿಸಿದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಮಹಿಳೆಯನ್ನು ರಕ್ಷಿಸಿದರು. ಈ ಸಂದರ್ಭದಲ್ಲಿ ಮಹಿಳೆ ಹಾಗೂ ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಘಟನೆಯ ವೇಳೆ ಮಹಿಳೆ ಮೂರ್ಛೆ ಹೋದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು.ರೈತರ ಹೋರಾಟದ ನಡುವೆಯೇ ನಡೆದ ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ರೈತರ ಬೇಡಿಕೆಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂಬ ಆಗ್ರಹವೂ ಪ್ರತಿಭಟನಾ ಸ್ಥಳದಲ್ಲಿ ತೀವ್ರವಾಗಿ ಕೇಳಿಬಂತು.
ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡ ಅಮರೇಶ ಎಚ್ಚರಿಕೆ ನೀಡಿದರು. ರೈತರ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚ ಆಧರಿಸಿದ ನ್ಯಾಯಯುತ ಬೆಲೆ ದೊರೆಯಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದರೆ ಕೃಷಿ ವೃತ್ತಿ ಸಂಕಷ್ಟಕ್ಕೆ ಸಿಲುಕಲಿದೆ. ಹೀಗಾಗಿ ಸರ್ಕಾರ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಬ್ಬು ಬೆಳೆಗಾರರು ಸೇರಿದಂತೆ ವಿವಿಧ ಬೆಳೆಗಳ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ಹಿಟ್ನಾಳ ಟೋಲ್ ಪ್ಲಾಜಾ ಬಳಿ ರೈತರ ಪ್ರತಿಭಟನೆ ಹಾಗೂ ಮಹಿಳೆಯ ಆತ್ಮಹತ್ಯೆ ಯತ್ನದ ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ರಸ್ತೆ ತಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯರೈತ ಸಂಘದ ಜಿಲ್ಲಾಧ್ಯಕ್ಷ ಸುಖಮುನಿಯಪ್ಪ, ಬಸವರಾಜ ಚೀಲವಾಡಗಿ, ರಾಮಯ್ಯ ಜವಳಗೇರಿ, ಮಂಜುನಾಥ ಗೋಧಿ, ಬಸಯ್ಯ ಗಡ್ಡಿಮಠ, ಸಂತೋಷಕುಮಾರ ಮೂಲಿಮನಿ ಸೇರಿದಂತೆ ಅನೇಕರು ಇದ್ದರು