ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ಹೊರವಲಯದಲ್ಲಿರುವ ಹಿಂಡಾಲ್ಕೋ ಕಂಪನಿಯ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಘಟನೆ ಬಳಿಕ ಆಕ್ರೋಶಗೊಂಡ ನೂರಾರು ಕಾರ್ಮಿಕರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಮೃತನನ್ನು ಬೆಳಗಾವಿ ತಾಲೂಕಿನ ಮುತ್ತ್ಯಾನಟ್ಟಿ ಗ್ರಾಮದ ನಿವಾಸಿ ಶಂಕರ ತಳವಾರ (24) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮುನ್ನ ಶಂಕರ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಡೆತ್ ನೋಟ್ ಹಾಕಿಕೊಂಡಿದ್ದಾನೆ. ಅದರಲ್ಲಿ ಕಂಪನಿಯಲ್ಲಿ ಹಳೆಯ ಕಾರ್ಮಿಕರನ್ನು ತೆಗೆದು ಹೊಸ ಕಾರ್ಮಿಕರನ್ನು ನೇಮಕ ಮಾಡಲಾಗುತ್ತಿದೆ. ಗುತ್ತಿಗೆದಾರ ಪೈಯಾಲ್ ನಂದಿ ತನ್ನ ಮೇಲೆ ಅನ್ಯಾಯ ಮಾಡಿದ್ದು, ಕೆಲಸ ಮುಂದುವರಿಸಬೇಕಾದರೆ ₹ 5 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಿದ್ದಾನೆ. ಬಡ ಕುಟುಂಬದ ಶಂಕರಗೆ ಅಷ್ಟೊಂದು ದೊಡ್ಡ ಮೊತ್ತದ ಹಣ ನೀಡಲು ಸಾಧ್ಯವಾಗಿರಲಿಲ್ಲ. ಕೆಲಸ ಕಳೆದುಕೊಳ್ಳುವ ಭೀತಿ ಹಾಗೂ ತೀವ್ರ ಮನಸ್ತಾಪದಿಂದ ಆತ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ.

ಶಂಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು, ಸ್ನೇಹಿತರು ಹಾಗೂ ಮುತ್ತ್ಯಾನಟ್ಟಿ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಹಿಂಡಾಲ್ಕೋ ಕಂಪನಿ ಎದುರು ಜಮಾಯಿಸಿದರು. ಗುತ್ತಿಗೆದಾರ ಹಾಗೂ ಕಂಪನಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಣಾಮ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಶಾಸಕ ಆಸೀಫ್ ಸೇಠ್ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಷನ್ ಹಿಂಡಾಲ್ಕೋ ಕಂಪನಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳದಲ್ಲಿ 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಘಟನೆ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.