ಕನ್ನಡಪ್ರಭ ವಾರ್ತೆ ಅರಸೀಕೆರೆ
ರಾಜ್ಯಾದ್ಯಂತ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆಗಳನ್ನು ತಕ್ಷಣವೇ ಬಂದ್ ಮಾಡಬೇಕು ಹಾಗೂ ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ನಗರದ ತಹಸೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸಂಪತ್ ಕುಮಾರ್, ಸನಾತನ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವಿದ್ದು, ಹಬ್ಬಗಳ ಹೆಸರಿನಲ್ಲಿ ನಡೆಯುತ್ತಿರುವ ಗೋವುಗಳ ಅಕ್ರಮ ಸಾಗಣೆ ಹಾಗೂ ಹತ್ಯೆ ಸಮಾಜದಲ್ಲಿ ಆತಂಕ ಮೂಡಿಸುತ್ತಿದೆ ಎಂದು ಆರೋಪಿಸಿದರು.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವುಗಳನ್ನು ಸಾಗಣೆ ಮಾಡುವ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಲಿ ನೀಡುವ ಸಾಧ್ಯತೆಗಳಿದ್ದು, ಇದನ್ನು ತಡೆಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೆಲವೆಡೆ ಅಕ್ರಮ ಕಸಾಯಿಖಾನೆಗಳು ನಿರ್ಭೀತಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುವ ಮನೆ, ಕಟ್ಟಡ ಮತ್ತು ಖಾಲಿ ಜಾಗಗಳನ್ನು ಗುರುತಿಸಿ ಜಪ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಜಾನುವಾರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣಗಳನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಮಾಂಸ ಸಾಗಣೆ ಮತ್ತು ಮಾರಾಟದ ನಿಯಮ ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಮಾಂಸವನ್ನು ವಶಪಡಿಸಿಕೊಳ್ಳಬೇಕು ಎಂದು ಹೇಳಿದರು.ಬಜರಂಗದಳ ಜಿಲ್ಲಾ ಸಂಯೋಜಕ ಸುನೀಲ್ ಅಪ್ಪು ಮಾತನಾಡಿ, ಅಕ್ರಮ ಕಸಾಯಿಖಾನೆಗಳಲ್ಲಿ ಗೋವುಗಳ ವಧೆ ನಡೆಸಿ ಸುಳ್ಳು ದಾಖಲೆ ಸೃಷ್ಟಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅಕ್ರಮವಾಗಿ ಜಾನುವಾರು ಹತ್ಯೆ ನಡೆಸುವವರಿಗೆ ಭಾರಿ ದಂಡ ವಿಧಿಸಬೇಕು ಎಂದು ಆಗ್ರಹಿಸಿದರು. ಅಕ್ರಮ ಸ್ಥಳಗಳಲ್ಲಿ ಕಟ್ಟಿಹಾಕಿರುವ ಜಾನುವಾರುಗಳನ್ನು ರಕ್ಷಿಸಿ ಸರ್ಕಾರಿ ಗೋಶಾಲೆಗಳಿಗೆ ಹಸ್ತಾಂತರಿಸಬೇಕು. ಯಾವುದೇ ಕಾರಣಕ್ಕೂ ಅವುಗಳನ್ನು ಮರಳಿ ನೀಡಬಾರದು ಎಂದು ಹೇಳಿದರು.
ಗ್ರೇಡ್- 2 ತಹಸೀಲ್ದಾರ್ ಪಾಲಾಕ್ಷ ಹಾಗೂ ಡಿವೈಎಸ್ಪಿ ಗೋಪಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಈ ವೇಳೆ ಬಜರಂಗದಳ ಜಿಲ್ಲಾ ಸಂಯೋಜಕ ಮನು, ಮನು ಅರೇಕೆರೆ, ವರುಣ್, ಸಮರ್ಥ್, ಭರತ್, ಅರುಣ್ ಕುಮಾರ್, ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.