ಸಾರಾಂಶ
ಘಟನೆ ನಡೆದ ತಕ್ಷಣ ಬರಬೇಕಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಬರಲಾಗಲಿಲ್ಲ. ಆದರೆ, ಘಟನೆ ಬಗ್ಗೆ ತಿಳಿದ ಕೂಡಲೇ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಚಿವರು, ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ ಎಂದು ಸಚಿವರು ಹೇಳಿದ್ದಾರೆ.
ಹುಬ್ಬಳ್ಳಿ:
ಇಲ್ಲಿನ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಹತ್ಯೆಗೀಡಾಗಿದ್ದ ನೇಹಾ ಹಿರೇಮಠ ನಿವಾಸಕ್ಕೆ ಸೋಮವಾರ ಗೃಹಸಚಿವ ಡಾ. ಜಿ. ಪರಮೇಶ್ವರ ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ನೇಹಾ ತಂದೆ ನಿರಂಜನ್ ಅವರೊಂದಿಗೆ ಅರ್ಧಗಂಟೆಗೂ ಹೆಚ್ಚುಕಾಲ ಚರ್ಚಿಸಿ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.ಬಳಿಕ ಮಾತನಾಡಿದ ಗೃಹ ಸಚಿವರು, ಘಟನೆ ನಡೆದ ತಕ್ಷಣ ಬರಬೇಕಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಬರಲಾಗಲಿಲ್ಲ. ಆದರೆ, ಘಟನೆ ಬಗ್ಗೆ ತಿಳಿದ ಕೂಡಲೇ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಚಿವರು, ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ ಎಂದರು.
ಈ ವೇಳೆ ನೇಹಾ ತಂದೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಮಾತನಾಡಿ, ಹತ್ಯೆಯಾಗಿ ತಿಂಗಳು ಕಳೆದಿದೆ. ತನಿಖೆ ವಿಳಂಬ ಆಗುತ್ತಿದೆ ಎಂದು ಅನ್ನಿಸುತ್ತಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಈ ಪ್ರಕರಣದಲ್ಲಿ ಆರೋಪಿಯೊಂದಿಗೆ ಇನ್ನೂ ನಾಲ್ವರ ಕೈವಾಡವಿರುವ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ಕೊಟ್ಟಿದ್ದರೂ ಅವರ ಮೇಲೆ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕೆಂದು ಮನವಿ ಮಾಡಿದರು.ಈ ವೇಳೆ ಗೃಹ ಸಚಿವರು ಮಾತನಾಡಿ, ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ನ್ಯಾಯ ಒದಗಿಸಲಾಗುವುದು ಹಾಗೂ ಆರೋಪಿಯೊಂದಿಗೆ ಬೇರೆಯಾದರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಆ ಬಗ್ಗೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ, ತನಿಖೆ ನಡೆಸಿ ತಪ್ಪಿತಸ್ಥರು ಇರುವುದು ಕಂಡುಬಂದರೆ ಅವರ ಮೇಲೂ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಂತರ ಗೃಹ ಸಚಿವರು ನೇಹಾ ಪಾಲಕರೊಂದಿಗೆ ಅರ್ಧಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ, ಸದಾನಂದ ಡಂಗನವರ ಸೇರಿದಂತೆ ಹಲವರಿದ್ದರು.