ಜಿಲ್ಲೆಯಲ್ಲಿ ಜರುಗಿರುವ ಅಂತರ್ಜಾತಿ ವಿವಾಹಗಳ ಕುರಿತು ಮಾಹಿತಿ ಪಡೆಯಬೇಕಿದೆ. ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಾಧಿಸಿ, ಜನರಿಗೆ ತಿಳಿವಳಿಕೆ ಮತ್ತು ಮನವರಿಕೆ ಮಾಡಬೇಕು.

ಧಾರವಾಡ:

ಇನಾಂವೀರಾಪುರದಲ್ಲಿ ಜರುಗಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಇಲಾಖೆಗಳು ಕೈಗೊಂಡ ಕ್ರಮಗಳ ಬಗ್ಗೆ ಪಾರದರ್ಶಕ ತನಿಖೆ ಕೈಗೊಂಡು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆ ಜರುಗಿಸಿದ ಅವರು, ಜಿಲ್ಲೆಯಲ್ಲಿ ಜರುಗಿರುವ ಅಂತರ್ಜಾತಿ ವಿವಾಹಗಳ ಕುರಿತು ಮಾಹಿತಿ ಪಡೆಯಬೇಕಿದೆ. ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಾಧಿಸಿ, ಜನರಿಗೆ ತಿಳಿವಳಿಕೆ ಮತ್ತು ಮನವರಿಕೆ ಮಾಡಬೇಕು. ಸಂವಿಧಾನದ ಆಶಯಗಳನ್ನು ತಿಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇಶದ ಕಾನೂನಿನ ಪ್ರಕಾರ ವಯಸ್ಸಿಗೆ ಬಂದ ಯುವಕ ಮತ್ತು ಯುವತಿಯರು ತಮ್ಮಿಷ್ಟದ ಸಂಗಾತಿಯನ್ನು ಮದುವೆಯಾಗಲು ಯಾವುದೇ ನಿರ್ಬಂಧಗಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಸಮಾಜದಲ್ಲಿ ಶಾಂತಿ ನೆಲೆಸಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪ್ರಕರಣದ ತನಿಖೆಗಾಗಿ ವಿಶೇಷ ಅಭಿಯೋಜಕರ ನೇಮಕ, ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ದೊಡಮನಿ ಕುಟುಂಬಕ್ಕೆ ವಸತಿ, ಉದ್ಯೋಗ ಹಾಗೂ ಪರಿಹಾರ ಪ್ಯಾಕೇಜ್ ಸೇರಿದಂತೆ ವಿವಿಧ ಸೌಲಭ್ಯಗಳ ಪುನರ್ವಸತಿ ಕಲ್ಪಿಸುವ ಕುರಿತು ಮಂತ್ರಿಮಂಡಳದ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಶಾಸಕರಾದ ಅಬ್ಬಯ್ಯ ಪ್ರಸಾದ ಹಾಗೂ ಎನ್‌.ಎಚ್‌. ಕೋನರಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಿ. ರಂದೀಪ್ ಮತ್ತು ಆಯುಕ್ತ ಡಾ. ರಾಕೇಶಕುಮಾರ ಮಾತನಾಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಇನಾಂವೀರಾಪುರ ಗ್ರಾಮದ ಪ್ರಕರಣದಲ್ಲಿ ಎಲ್ಲ ಇಲಾಖೆಗಳು ಸೂಕ್ತ ಕ್ರಮ ವಹಿಸಿವೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲಾಗಿದ್ದು, ರಕ್ಷಣೆಯ ಭರವಸೆ ಮೂಡಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಆರೋಪ ಪಟ್ಟಿ (ಚಾರ್ಜ್ ಶೀಟ್) ತಯಾರಿಸಲಾಗುವುದು ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ, ರವೀಂದ್ರ ಗಡಾದ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಇದ್ದರು.