ಹಾವೇರಿ: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದ ನಿಮಿತ್ತ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಜಿಲ್ಲೆಯ ಮೂವರಿಗೆ ಗೌರವ ಡಾಕ್ಟರೆಟ್ ನೀಡಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಶಿಕ್ಷಣ ಕ್ಷೇತ್ರದಿಂದ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಸಾಮಾಜಿಕ ಸೇವೆ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಾಹಿತ್ಯ ಕ್ಷೇತ್ರದಿಂದ ಸಾಹಿತಿ ಸತೀಶ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ತಿಳಿಸಿದ್ದಾರೆ.ಏ. 6ರಂದು ಘಟಿಕೋತ್ಸವ: ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಏ. 6ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಜಿ.ಎಚ್. ಕಾಲೇಜು ಸಭಾಂಗಣದಲ್ಲಿ ಜರುಗಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಜಸ್ಟಿಸ್ ಡಾ. ಅಶೋಕ ಹಿಂಚಿಗೇರಿ ಅವರು ಘಟಿಕೋತ್ಸವ ಭಾಷಣ ಮಾಡುವರು.