ಕನ್ನಡ ರಾಜ್ಯೋತ್ಸವ: ಸಾಧಕರಿಗೆ ಸನ್ಮಾನ

| Published : Oct 28 2025, 12:37 AM IST

ಸಾರಾಂಶ

ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಅಂಥವರ ಪಟ್ಟಿಯನ್ನು ತಾಲೂಕಾಡಳಿತಕ್ಕೆ ಸಲ್ಲಿಸಬೇಕು ಎಂದು ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ ಹೇಳಿದರು.

ಕುಷ್ಟಗಿ: ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಅಂಥವರ ಪಟ್ಟಿಯನ್ನು ತಾಲೂಕಾಡಳಿತಕ್ಕೆ ಸಲ್ಲಿಸಬೇಕು ಎಂದು ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ಗುರುತಿಸಿ ಗೌರವಿಸುವ ಕೆಲಸ ಕೆಲಸ ಮಾಡಲಾಗುತ್ತದೆ ಎಂದರು.

ನ. 1ರಂದು ಬೆಳಗ್ಗೆ 7.30ಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, 8 ಗಂಟೆಗೆ ಮಲ್ಲಯ್ಯ ವೃತ್ತದಿಂದ ಮೆರವಣಿಗೆ ಹೊರಡಲಿದೆ. ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಶಾಸಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಕಸಾಪ ತಾಲೂಕಾಧ್ಯಕ್ಷ ಲೆಂಕಪ್ಪ ವಾಲಿಕಾರ ಮಾತನಾಡಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟಗಳನ್ನು, ಬಂಟಿಂಗ್ಸ್ ಕಟ್ಟಬೇಕು. ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆಗೆ ಕಲಾ ತಂಡಗಳನ್ನು ಕರೆಸಬೇಕು ಎಂದು ಹೇಳಿದರು.

ಮಂಜುನಾಥ ಗುಳೇದಗುಡ್ಡ ಮಾತನಾಡಿ, ಹನುಮಸಾಗರದ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು, ಗ್ರಾಪಂ ಸಹಕಾರ ನೀಡಬೇಕು ಎಂದು ಕೋರಿದರು.

ಕನ್ನಡಪರ ಸಂಘಟನೆ ಮುಖಂಡ ಕೃಷ್ಣಮೂರ್ತಿ ಹಾಗೂ ಚುಟುಕು ಸಾಹಿತ್ಯ ಪರಿಷತ್ತು ತಾಲೂಕಾಧ್ಯಕ್ಷ ಮಹೇಶ ಹಡಪದ ಮಾತನಾಡಿ, ಮೆರವಣಿಗೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.