ಹಾವೇರಿ: ಕನಿಷ್ಠ ವೇತನ ಪರಿಷ್ಕರಣೆ ಜಾರಿ, ಕಾಯಂ ನೇಮಕ ಹಾಗೂ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ಸಿಬ್ಬಂದಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ 15ರಿಂದ 20 ವರ್ಷಗಳಿಂದ ಅಲ್ಪ ವೇತನಕ್ಕೆ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್‌ಗಳು, ಡೇಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಇಲ್ಲದೆ ಶೋಷಣೆ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನ ತಕ್ಷಣ ಜಾರಿಗೆ ತಂದು ತಿಂಗಳಿಗೆ ₹36 ಸಾವಿರ ವೇತನ ನೀಡಬೇಕು, ಗುತ್ತಿಗೆ ಪದ್ಧತಿ ರದ್ದುಪಡಿಸಿ ಇಲಾಖೆಯಿಂದಲೇ ನೇರ ವೇತನ ಪಾವತಿಸಬೇಕು, ನಿವೃತ್ತಿ ವರೆಗೆ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬಾಕಿ ಸಂಬಳ ಪಾವತಿ, ಸಿಬ್ಬಂದಿ ಸಂಖ್ಯೆ ಕಡಿತ ಆದೇಶ ಹಿಂಪಡೆಯುವುದು, ಆರೋಗ್ಯ ಸಂಜೀವಿನಿ ಯೋಜನೆ, ಮಹಿಳಾ ಸಿಬ್ಬಂದಿಗೆ ಹೆರಿಗೆ ಹಾಗೂ ಋತುಚಕ್ರ ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಬಳಿಕ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಹನುಮೇಗೌಡ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಜಿಲ್ಲಾಧ್ಯಕ್ಷೆ ಶಾಂತಕ್ಕ ಗಡ್ಡಿಯವರ, ಎಚ್.ಎಚ್. ನದಾಫ್, ಶಿವರಾಜ ಹಿತ್ಲರ್, ಶೋಭಾ ಡೊಳ್ಳೇಶ್ವರ್, ಸುನೀತಾ ಬಡನಾಯಕ, ನಾಗರಾಜ ಮಾಕನೂರ, ಹನುಮಂತ, ಉಮೇಶ್ ಗಾಂಧಿ, ಲಲಿತಾ ಮೀರಿಜಿ ಪಾಲ್ಗೊಂಡಿದ್ದರು.