ಸಾರಾಂಶ
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾದ್ಯತೆ ಇದೆ. ಆದ್ದರಿಂದ ಆದಷ್ಟು ಬಿಸಿಲಿನಿಂದ ದೂರವಿರುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ವಿಪತ್ತು ನಿರ್ವಹಣಾ ಪ್ರಾಧಿಕಾರಿಗಳು ಸೂಚನೆ ನೀಡಿವೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡದಲ್ಲಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾದ್ಯತೆ ಇದೆ. ಆದ್ದರಿಂದ ಆದಷ್ಟು ಬಿಸಿಲಿನಿಂದ ದೂರವಿರುವಂತೆ ಸೂಚನೆ ನೀಡಿದೆ.ಹತ್ತಿಯ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಬಳಕೆ ಮಾಡಬೇಕು. ಬೆಳಗ್ಗೆ 11ರಿಂದ ಸಂಜೆ 4ರ ಅವಧಿಯಲ್ಲಿ ಬಿಸಿನಿಲಿನಿಂದ ದೂರ ಇರುವುದು ಒಳಿತು. ಹಿರಿಯ ನಾಗರಿಕರು ಮತ್ತು ಮಕ್ಕಳು ಹೆಚ್ಚು ನೀರು ಸೇವಿಸಬೇಕು. ಮಜ್ಜಿಗೆ ಮತ್ತು ಗ್ಲುಕೋಸ್ (ಒಆರ್‌ಎಸ್) ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಬಳಸುವ ಮೂಲಕ ಆರೋಗ್ಯ ಕಾಯ್ದುಕೊಳ್ಳಬಹುದು. ಬಿಸಿಲಿನಿಂದ ವಿಟಮಿನ್ ‘ಸಿ’ ಕೊರತೆ ಎದುರಾಗುವುದರಿಂದ ಹೆಚ್ಚು ನಿಂಬೆ ಹಣ್ಣಿನ ಜ್ಯೂಸ್ ಕುಡಿದರೆ ಉತ್ತಮ. ಅಲ್ಲದೆ ಹೆಚ್ಚು ಮಸಾಲೆ ಪದಾರ್ಥಗಳನ್ನು ಬಳಸದ ಆಹಾರವನ್ನು ಬಳಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಮುಂಜಾಗ್ರತೆ ವಹಿಸಿ: ಡಿಸಿ ವಿದ್ಯಾಕುಮಾರಿ
ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ ಸ್ಟ್ರೋಕ್ (ಶಾಖದ ಹೊಡೆತ)ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ.ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಸೇವಿಸಬೇಕು.ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಸಾಕಷ್ಟು ನೀರಿನೊಂದಿಗೆ ಮಜ್ಜಿಗೆ ಮತ್ತು ಗ್ಲೂಕೋಸ್ / (ಓ.ಆರ್.ಎಸ್) ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಜೊತೆಗೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಳ್ಳಬೇಕು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‌ಗಳ ಮಧ್ಯ ಇಡಬಹುದು.ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ತುರ್ತು ಸೇವೆಗಾಗಿ ಶುಲ್ಕ ರಹಿತ 1077 ಹಾಗೂ ದೂರವಾಣಿ ಸಂಖ್ಯೆ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.