ಕನ್ನಡಪ್ರಭ ವಾರ್ತೆ ಗೋಕಾಕ

ನಗರದ ವಿವೇಕಾನಂದ ನಗರದಲ್ಲಿ ಮನೆಯೊಂದರ ಬೀಗ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಹಣ ಕಳವು ಮಾಡಿದ್ದ ಪ್ರಕರಣವನ್ನು ಗೋಕಾಕ ಶಹರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಹಳೇಹುಬ್ಬಳ್ಳಿಯ ಕೈಸಅಹ್ಮದ ಅಲಿಯಾಸ್ ಬಾಬಾಜಾನ (58) ಹಾಗೂ ಹುಸೇನಸಾಬ ಇಮಾಮಸಾಬ ಕನವಳ್ಳಿ (32) ಬಂಧಿತ ಆರೋಪಿಗಳು. ಗೋಕಾಕದ ವಿವೇಕಾನಂದ ನಗರದ 1ನೇ ಕ್ರಾಸ್ ನಿವಾಸಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನೌಕರ ಕೈಸರ ಉಸ್ಮಾನ್ ಬಾಬುಸಾಬ ದೇವಡಿ (40) ಅವರ ಮನೆಯಲ್ಲಿ ಅ.15ರ ರಾತ್ರಿ 8 ಗಂಟೆಯಿಂದ ಅ.16ರ ಬೆಳಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿತ್ತು. ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು 170 ಗ್ರಾಂ ಚಿನ್ನದ ಆಭರಣಗಳು, 26 ತೊಲೆ ಬೆಳ್ಳಿ ಆಭರಣಗಳು, 7 ಕ್ಯಾರೆಟ್ ವಜ್ರದ ಆಭರಣಗಳು ಹಾಗೂ ₹20 ಸಾವಿರ ನಗದು ಸೇರಿದಂತೆ ಒಟ್ಟು ₹15.58 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು.

ಪ್ರಕರಣದ ತನಿಖೆಗಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮರಾಜನ್ ಕೆ. ಅವರ ಮಾರ್ಗದರ್ಶನದಲ್ಲಿ, ಗೋಕಾಕ ಸಿಪಿಐ ವಿಜಯಕುಮಾರ ಸಿನ್ನೂರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಗೋಕಾಕ ಡಿವೈಎಸ್ಪಿ ರವಿ ಡಿ. ನಾಯ್ಕ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಳ್ಳಲಾಗಿತ್ತು.

ವಿಚಾರಣೆ ವೇಳೆ ಆರೋಪಿಗಳು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಅವರಿಂದ 45.5 ಗ್ರಾಂ ಚಿನ್ನದ ಆಭರಣಗಳು, 260 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ₹7,22,700 ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.