ಸಾರಾಂಶ
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ. ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ತಾವು ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ/ಹುಬ್ಬಳ್ಳಿ
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ. ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ತಾವು ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.ದಾವಣಗೆರೆ ಜಿಲ್ಲೆ ತ್ಯಾವಣಿಗೆ ಗ್ರಾಮದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಇಡೀ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಎಲ್ಲ 28 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದ್ದು, ದಾವಣಗೆರೆಯಲ್ಲೂ ಗಾಯತ್ರಿ ಸಿದ್ದೇಶ್ವರ ಅವರು ಕನಿಷ್ಠ 1.5 ಲಕ್ಷದಿಂದ 2 ಲಕ್ಷಗಳ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.
ದೇಶದಲ್ಲಿ ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ ಆಗುತ್ತದೆ. ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರದ ಬಲದಿಂದ ಜಾತಿಯ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತಿದ್ದ ಕಾಂಗ್ರೆಸ್ಸಿನ ಆಟ ಇನ್ನು ಮುಂದೆ ನಡೆಯುವುದಿಲ್ಲ. ಜನತೆ ಬುದ್ಧಿವಂತರಾಗಿದ್ದಾರೆ. ನರೇಂದ್ರ ಮೋದಿಯವರ ಆಡಳಿತವನ್ನು ದೇಶದ ಜನ ಮೆಚ್ಚಿದ್ದಾರೆ. ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಆಗುವುದು ಸೂರ್ಯ-ಚಂದ್ರರು ಇರುವಷ್ಟೇ ಸತ್ಯ ಎಂದು ಹೇಳಿದರು. ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಮುಂದಾಗಬಾರದು:ಬಳಿಕ, ಹುಬ್ಬಳ್ಳಿಯಲ್ಲಿ ಮಾತನಾಡಿ, ಧಾರವಾಡ ಲೋಕಸಭಾ ಕ್ಷೇತ್ರದ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಮುಂದಾಗಬಾರದು. ನಾನು ಮತ್ತೊಮ್ಮೆ ಶ್ರೀಗಳನ್ನು ಸಂಪರ್ಕಿಸಿ ಅವರ ಮನವೊಲಿಸಲು ಪ್ರಯತ್ನಿಸುವೆ ಎಂದು ಮನವಿ ಮಾಡಿದರು.
ಜೋಶಿಯವರು ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಿವೆ. ಈ ಬಾರಿಯೂ ಜೋಶಿಯವರು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.