ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ ಭಾರತೀಯರ ಸರಾಸರಿ ಜೀವಿತಾವಧಿ ಕೇವಲ 40 ರಿಂದ 50 ವರ್ಷಗಳಷ್ಟಿತ್ತು. ಅಂದು ರೋಗ ನಿರೋಧಕ ಶಕ್ತಿ ಕಡಿಮೆ ಇದ್ದ ಕಾರಣ ಸಾಂಕ್ರಾಮಿಕ ಕಾಯಿಲೆಗಳಿಗೆ ಜನರು ಬಲಿಯಾಗುತ್ತಿದ್ದರು. ಆದರಿಂದು ಪೋಲಿಯೋ, ಟಿಬಿ ಅಂತಹ ರೋಗಗಳನ್ನು ಲಸಿಕೆಗಳ ಮೂಲಕ ಯಶಸ್ವಿಯಾಗಿ ತಡೆಗಟ್ಟಲಾದ ಪರಿಣಾಮ ಜೀವಿತಾವಧಿ 60 ರಿಂದ 70 ವರ್ಷಕ್ಕೆ ಏರಿಕೆಯಾಗಿದೆ. ಹಾಗೆಯೇ ಪ್ರಸ್ತುತ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಯಲು ಈ ಎಚ್‌ಪಿವಿ ಲಸಿಕೆ ಶ್ರೀರಕ್ಷೆಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಶೇ.51ರಷ್ಟು ಲಸಿಕಾ ಪ್ರಗತಿಯಾಗಿದ್ದು, ರಾಜ್ಯ ಮಟ್ಟದಲ್ಲಿ ನಾವು 6ನೇ ಸ್ಥಾನದಲ್ಲಿದ್ದೇವೆ. ಉಳಿದ ಶೇ. 49ರಷ್ಟು ಗುರಿಯನ್ನು ತಲುಪಲು ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಶ್ರಮಿಸಬೇಕು. ಶಾಲಾ ರಜೆ ಇರುವ ಕಾರಣ ಮಕ್ಕಳು ಮನೆಗಳಲ್ಲಿ ಇರುತ್ತಾರೆ, ಅಂತಹವರನ್ನು ಗುರುತಿಸಿ ಲಸಿಕೆ ಹಾಕಿಸಬೇಕು. ಲಸಿಕೆ ಪಡೆದ ಮಕ್ಕಳ ಪೋಷಕರಿಂದ ಸಣ್ಣ ವಿಡಿಯೋಗಳನ್ನು ಚಿತ್ರಿಸಿ, ಅದನ್ನು ಇತರ ಪೋಷಕರಿಗೆ ತೋರಿಸುವ ಮೂಲಕ ಅವರಲ್ಲಿರುವ ಗೊಂದಲಗಳನ್ನು ನಿವಾರಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್‌ಗೆ 12ರಿಂದ 18 ಸಾವಿರ ರು. ಮೌಲ್ಯದ ಈ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.


ಆರ್‌ಸಿಎಚ್ ಅಧಿಕಾರಿ ಡಾ.ಎಚ್.ಕೆ.ಮಂಜುನಾಥ್ ಮಾತನಾಡಿ, ಭಾರತೀಯ ಮಹಿಳೆಯರನ್ನು ಕಾಡುತ್ತಿರುವ ಮಾರಕ ಕಾಯಿಲೆಗಳಲ್ಲಿ ಎರಡನೇ ಸ್ಥಾನದಲ್ಲಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ.99.7ರಷ್ಟು ಪ್ರಕರಣಗಳು ‘ಹ್ಯೂಮನ್ ಪ್ಯಾಪಿಲೋಮ ವೈರಸ್’ನಿಂದಲೇ ಸಂಭವಿಸುತ್ತಿವೆ. ಈ ವೈರಸ್ ವಿರುದ್ಧ ಲಸಿಕೆ ಪಡೆಯುವುದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಬರದಂತೆ ತಡೆಯಬಹುದು. ಖಾಸಗಿ ಆಸ್ಪತ್ರೆಗಳಲ್ಲಿ ಬುದಾರಿ ಬೆಲೆ ಮಾರಾಟ ಮಾಡುತ್ತಿದ್ದಾರೆ. ಆದರೆ, ಸರ್ಕಾರವು ಈ ದುಬಾರಿ ಲಸಿಕೆಯನ್ನು ಉಚಿತವಾಗಿ ನೀಡುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಲಸಿಕೆಯನ್ನು 9 ರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 10,661ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದು, ಈಗಾಗಲೇ ಶೇ.51 ರಷ್ಟು ಸಾಧನೆಯಾಗಿದೆ. ಈ ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಅಲರ್ಜಿಯಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಬಹಳ ವಿರಳ. ಲಸಿಕೆ ಪಡೆದ ನಂತರ ಮಕ್ಕಳು ಕನಿಷ್ಠ 30ನಿಮಿಷಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಬೇಕು ಎಂದು ಸಲಹೆ ನೀಡಿದರು.

ಅರ್ಹ ಹೆಣ್ಣುಮಕ್ಕಳ ಪೋಷಕರು ಈ ಸದಾವಕಾಶವನ್ನು ಬಳಸಿಕೊಂಡು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ವೈದ್ಯಾಧಿಕಾರಿಗಳಾದ ಡಾ.ರಂಜಿತಾ, ಡಾ.ದಿವ್ಯಶ್ರೀ ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇದ್ದರು.