ಜನಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಎಚ್.ಎಸ್.ಮಹದೇವಪ್ರಸಾದ್: ಶಾಸಕ ಎಚ್.ಎಂ.ಗಣೇಶ ಪ್ರಸಾದ್

| Published : Aug 06 2024, 12:34 AM IST

ಜನಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಎಚ್.ಎಸ್.ಮಹದೇವಪ್ರಸಾದ್: ಶಾಸಕ ಎಚ್.ಎಂ.ಗಣೇಶ ಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು ಜನ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶಪ್ರಸಾದ್ ಸ್ಮರಿಸಿದರು. ಚಾಮರಾಜನಗರದಲ್ಲಿ ಮಹದೇವಪ್ರಸಾದ್‌ ಅವರ 66ನೇ ವರ್ಷದ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು ಜನ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶಪ್ರಸಾದ್ ಸ್ಮರಿಸಿದರು.

ತಾಲೂಕಿನ ಹರವೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಸಚಿವ ದಿ.ಎಚ್‌.ಎಸ್‌.ಮಹದೇವಪ್ರಸಾದ್‌ ಅವರ 66ನೇ ವರ್ಷದ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ತಂದೆಯವರಾದ ಎಚ್.ಎಸ್.ಮಹದೇವಪ್ರಸಾದ್ ಅವರು ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿ ಜೊತೆಗೆ ರಾಜ್ಯಾದ್ಯಂತ ತಮ್ಮ ವರ್ಚಸ್ಸು ಹೊಂದಿದ್ದರು. 5 ಬಾರಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸುವ ಜೊತೆ ಕ್ಷೇತ್ರದ ಜನತೆಯೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯಾದಾಗ ಹರವೆ ಭಾಗದ 5 ಗ್ರಾಪಂಗಳು ಕ್ಷೇತ್ರಕ್ಕೆ ಸೇರ್ಪಡೆಯಾಯಿತು. ಅಲ್ಲಿಂದ ಈ ಭಾಗದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದರು ಎಂದು ತಿಳಿಸಿದರು.

ಪ್ರಮುಖವಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಮೊರಾರ್ಜಿ ವಸತಿ ಶಾಲೆ ಸೇರಿದಂತೆ ಶಿಕ್ಷಣ, ಆರೋಗ್ಯ, ಮೂಲ ಸೌಲಭ್ಯಗಳನ್ನು ಕಲ್ಪಿಸವ ಮೂಲಕ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಹುಟ್ಟುಹಬ್ಬವನ್ನು ಸೇವಾ ಕಾರ್ಯದ ಮೂಲಕ ಕೆರೆಹಳ್ಳಿ ನವೀನ್ ನೇತೃತ್ವದಲ್ಲಿ ಕಳೆದ 9 ವರ್ಷಗಳಿಂದ ಆಚರಿಸಿಕೊಂಡು‌ ಬರುತ್ತಿರುವುದು ಪ್ರಶಂಸನೀಯ ಎಂದರು.ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್‌ ಮಾತನಾಡಿ, ನನ್ನ ನೆಚ್ಚಿನ ರಾಜಕೀಯ ಗುರುಗಳಾದ ಮಾಜಿ ಸಚಿವ ದಿ.ಎಚ್‌.ಎಸ್‌.ಮಹದೇವ ಪ್ರಸಾದ್‌ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಸೇವಾ ಕಾರ್ಯಗಳೊಂದಿಗೆ ಆಚರಿಸಲಾಗುತ್ತಿದೆ. ತಂದೆಯ ಹಾದಿಯಲ್ಲಿ ಶಾಸಕ ಎಚ್.ಎಂ. ಗಣೇಶಪ್ರಸಾದ್ ಅವರು ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕ್ಷೇತ್ರದ ಜನರ ಸಂಕಷ್ಟಗಳಿಗೆ ನೇರವಾಗಿ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಶಿಬಿರದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿ ತಪಾಸಣೆ ಮಾಡಿಸಿದರು. ಅದರಲ್ಲಿ 105 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಎಂ.ಬಿ.ರೇವಣ್ಣ, ಸದಸ್ಯರಾದ ಮುಕ್ಕಡಹಳ್ಳಿ ರವಿಕುಮಾರ್, ಬಿ.ಎಸ್. ರೇವಣ್ಣ, ಉದಯಕುಮಾರ್‌, ಜಿಪಂ ಮಾಜಿ ಸದಸ್ಯ ಗುರುಸಿದ್ದೇಗೌಡ, ಮುಖಂಡರಾದ ಕೇತಹಳ್ಳಿ ಶಿವಪಾದಪ್ಪ, ಗುರುಬಸಪ್ಪ, ಪಿ.ಶೇಖರಪ್ಪ, ಮಲೆಯೂರು ನಾಗರಾಜು, ರೇವಪ್ಪ, ರವಿ, ನಾಗೇಶ್, ಹಳೇಪುರದ ಬಸವಣ್ಣ, ಪಿಆರ್‌ಓ ವಿಜಯಕಾಂತ್, ಮೂಡ್ನಾಕೂಡು ಕುಮಾರ್, ಪುಟ್ಟರಂಗನಾಯಕ, ಸಾಗಡೆ ನಂಜುಂಡನಾಯಕ, ಡಾ.ಸುರೇಶ್, ಪ್ರಕಾಶ್, ರಂಗಸ್ವಾಮಿ, ಮಧುಸೂದನ್, ಕೆಂಪರಾಜು ರಾಜ್ ಕುಮಾರ್, ಕೆಬ್ವೇಪುರ ಹರೀಶ್, ಶಿವಕುಮಾರ್, ಕಲ್ಪುರ ಸೋಮಶೇಖರ್ ಇತರರು ಹಾಜರಿದ್ದರು.