ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. 22 ವರ್ಷಗಳಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಸಲೀಂ ಅಹ್ಮದ್ ಹೇಳಿದರು.
ಹುಬ್ಬಳ್ಳಿ:ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟದ ಪುನಾರಚನೆ ಸಾಧ್ಯತೆಯಿದೆ. ಉತ್ತಮವಾಗಿ ಕಾರ್ಯನಿರ್ವಹಿಸಿದ ಶೇ. 50ರಷ್ಟು ಸಚಿವರಿಗೆ ಪಕ್ಷದ ಜವಾಬ್ದಾರಿ ನೀಡಿ, ಹೊಸಬರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. 22 ವರ್ಷಗಳಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಹಿಂದೆಯೇ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಈ ನಿರ್ಧಾರ ಕೈಗೊಳ್ಳಲಿದೆ ಎಂದರು.ದೇಶಾದ್ಯಂತ ಹೋರಾಟ:ಮನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರು ತೆಗೆದು ಹಾಕಿರುವುದು ಖಂಡನಾರ್ಹ. ಈ ಹೆಸರು ಬದಲಿಸುವ ಔಚಿತ್ಯ ಏನಿತ್ತು? ಬಿಜೆಪಿಯವರು ನೆಹರು, ರಾಜೀವ ಗಾಂಧಿ, ಇಂದಿರಾ ಗಾಂಧಿ ಅವರನ್ನೂ ಬಿಡಲಿಲ್ಲ. ಈಗ ಮಹಾತ್ಮ ಗಾಂಧಿಯನ್ನು ಬಿಡುತ್ತಿಲ್ಲ. ಇವರು ಗಾಂಧಿ ವಿರೋಧಿಗಳು. ಹಾಗಾಗಿ ಅವರ ಹೆಸರು ಬದಲಾವಣೆ ಮಾಡಿದೆ. ಇದನ್ನು ಕಾಂಗ್ರೆಸ್ ಖಂಡಿಸಿದ್ದು ಇದರ ವಿರುದ್ಧ ಜ. 5ರಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.ಸರ್ವಾಧಿಕಾರಿ ಧೋರಣೆ:ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆಯೇ ವಿನಃ ಪ್ರಧಾನಿ ನರೇಂದ್ರ ಮೋದಿ ಅವರಂತೆ ಸರ್ವಾಧಿಕಾರಿ ಧೋರಣೆಯಿಲ್ಲ. ಕೇಂದ್ರ ಸರ್ಕಾರ ಪರ್ವತ, ಸಮುದ್ರ, ನದಿ, ವಿಮಾನ ನಿಲ್ದಾಣಗಳನ್ನು ಅದಾನಿ, ಅಂಬಾನಿ ಕುಟುಂಬಗಳಿಗೆ ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರ ಭಂಡ ಸರ್ಕಾರವಾಗಿದ್ದು ವಿಪಕ್ಷಗಳನ್ನು ಹೆದರಿಸಲು ಸಿಬಿಐ, ಇಡಿ ಸೇರಿದಂತೆ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.ರಾಹುಲ್ ಮುಂದಿನ ಪ್ರಧಾನಿ:ಏಪ್ರಿಲ್- ಮೇ ತಿಂಗಳಲ್ಲಿ ಜಿಪಂ, ತಾಪಂ, ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಒತ್ತು ನೀಡಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದ ಅವರು, 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕೇಂದ್ರದಲ್ಲೂ ಮುಂದಿನ ಬಾರಿ ಯುಪಿಎ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಗ್ಯಾರಂಟಿ ನಿಲ್ಲಿಸಿ ಎನ್ನಲಿ:ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿರುವುದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಸುಳ್ಳು ಹೇಳಿಕೆ ನೀಡುವ ಮೂಲಕ ಮೊಸರಲ್ಲಿ ಕಲ್ಲು ಹುಡುಕುವ ಕಾರ್ಯ ಮಾಡುತ್ತಿದ್ದಾರೆ. ಅವರಿಗೆ ಧೈರ್ಯವಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಬಹಿರಂಗವಾಗಿ ಹೇಳಿಕೆ ನೀಡಲಿ ಎಂದು ಸಲೀಂ ಅಹ್ಮದ್ ಸವಾಲು ಹಾಕಿದರು.ಹಿಂದಿನ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ನೀಡಿ ಜನರ ವಿಶ್ವಾಸ ಕಳೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ತುಂಬಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳು ಹಾಗೂ ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಸುವುದಾಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಎಸ್. ಅಕ್ಕಿ, ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಚಂದ್ರಶೇಖರ ಜುಟ್ಟಲ್ ಸೇರಿದಂತೆ ಹಲವರಿದ್ದರು.