ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಸರಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾ.7 ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾವೇಶದಲ್ಲಿ 50 ಸಾವಿರ ಫಲಾನುಭವಿಗಳನ್ನು ಸೇರಿಸಲು ನಿರ್ಧರಿಸಲಾಗಿದೆ. ಬಾಗಲಕೋಟೆ ತಾಲೂಕಿನಿಂದ 10 ಸಾವಿರ ಹಾಗೂ ಉಳಿದ ತಾಲೂಕಿನಿಂದ ತಲಾ 7 ಸಾವಿರ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆ ತರಲು ಕ್ರಿಯಾಯೋಜನೆ ರೂಪಿಸುವಂತೆ ತಹಸೀಲ್ದಾರರಿಗೆ ತಿಳಿಸಿದರು.
ಸರಕಾರದ ನಿರ್ದೇಶನದ ಮೇರೆಗೆ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಮಾವೇಶ ಆಯೋಜಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸಲಿರುವ ಫಲಾನುಭವಿಗಳ ಪಟ್ಟಿ ಮಾಡಲು ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಮಾಡಲಾಗಿದ್ದು, ತಮಗೆ ವಹಿಸಿ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.ಅರ್ಹ ಫಲಾನುಭವಿಗಳು ಮಾಹಿತಿ ಕೊರತೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಜನರಲ್ಲಿ ಜಾಗೃತಿ ಮೂಡಿಸಲು ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಸಮಾವೇಶದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಆಯಾ ಇಲಾಖೆಯವರು ಪ್ರತಿ ಯೋಜನೆಗೆ ಎರಡು ಮಳಿಗೆ ಹಾಕಬೇಕು. ಇಲಾಖೆಯಿಂದ ಐಇಸಿ ಚಟುವಟಿಕೆಗಳನ್ನು ಸಹ ಏರ್ಪಡಿಸಬೇಕು. ಇಲಾಖೆಯಿಂದ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸಗಳು ಇದ್ದಲ್ಲಿ ಮಾಹಿತಿ ನೀಡಲು ಸೂಚಿಸಿದರು.
ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಅನುಭವ ಹಂಚಿಕೊಳ್ಳಲು ಪ್ರತಿ ಯೋಜನೆಯಿಂದ 5 ಫಲಾನುಭವಿಗಳ ಪಟ್ಟಿ ಮಾಡಿ ನೀಡಲು ತಿಳಿಸಿದ ಜಿಲ್ಲಾಧಿಕಾರಿ, ಸಮಾವೇಶಕ್ಕೆ ಆಗಮಿಸಲಿರುವ ಸಂಖ್ಯೆಯ ಮಾಹಿತಿ ಮೇರೆಗೆ ಸ್ಥಳ ಆಯ್ಕೆ ಮಾಡಿಕೊಳ್ಳಲಾಗುವುದೆಂದು ತಿಳಿಸಿದರು.ವೇದಿಕೆ ನಿರ್ಮಾಣ, ಸೌಂಡ್ ಸಿಸ್ಟಂ, ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಕಾರ್ಯಗಳಿಗೆ ಸಮಿತಿ ರಚಿಸಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲ ರೀತಿಯ ಕ್ರಮ ವಹಿಸಲಾಗುವುದೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಶಾಲಾ ಶಿಕ್ಷಣ ಇಲಾಖೆ ಉಪನಿದೇರ್ಶಕ ಬಿ.ಕೆ. ನಂದನೂರ, ಸಮಾಜ ಕಲ್ಯಾಣ ಇಲಾಖೆಉಪನಿರ್ದೇಶಕಿ ನಂದಾ ಹಣಮರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತುಂಬರಮಟ್ಟಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ಸೇರಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯಾ ತಾಲೂಕಿನ ತಹಸೀಲ್ದಾರರು ಪಾಲ್ಗೊಂಡಿದ್ದರು.