ಮುನಿರಾಬಾದ್‌: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ದಸರಾ ಮಹೋತ್ಸವ ಮಂಗಳವಾರ ಅಮ್ಮನವರ ದಶಮಿ ದಂಡಿನ ಉತ್ಸವದೊಂದಿಗೆ ಸಂಪನ್ನಗೊಂಡಿತು.

ವಿಜಯದಶಮಿ ಅಂಗವಾಗಿ ಅಮ್ಮನವರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಶಿವಪುರ ರಸ್ತೆಯಲ್ಲಿರುವ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜಾ ವಿಧಿ-ವಿಧಾನಗಳ ನಂತರ ಉತ್ಸವ ಮೂರ್ತಿಯನ್ನು ಮರಳಿ ದೇವಸ್ಥಾನಕ್ಕೆ ಕರೆತರಲಾಯಿತು. ಅಮ್ಮನವರಿಗೆ ವಿಶೇಷ ಸೇವೆ ಸಲ್ಲಿಸಿ, ಮಹಾಮಂಗಳಾರತಿ ಹಾಗೂ ಮಂತ್ರಪುಷ್ಪ ಸಮರ್ಪಿಸುವುದರೊಂದಿಗೆ ಹತ್ತು ದಿನಗಳ ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

ಪ್ರತಿದಿನ ದುರ್ಗಾ ಹೋಮ: ಪ್ರಸಕ್ತ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಪ್ರತಿದಿನ ದುರ್ಗಾ ಹೋಮ ನೆರವೇರಿಸಲಾಯಿತು. ದೇವಸ್ಥಾನದ ರಾಜಬೀದಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಕಣ್ಮನ ಸೆಳೆಯುವ ಅಲಂಕಾರವನ್ನು ವೀಕ್ಷಿಸಲು ವಿವಿಧ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಜತೆಗೆ ಭರತನಾಟ್ಯಕ್ಕೆ ವಿಶೇಷ ಪ್ರಾಧಾನ್ಯ ನೀಡಲಾಯಿತು. ಐದರಿಂದ ಆರು ಭರತನಾಟ್ಯ ನೃತ್ಯ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸಿದರು.

ರಾಷ್ಟ್ರಮಟ್ಟಕ್ಕೆ ವಾಲಿಬಾಲ್ ಪಂದ್ಯಾವಳಿ: ದೇವಸ್ಥಾನ ಪ್ರಾಧಿಕಾರದ ವತಿಯಿಂದ ರಾಜ್ಯಮಟ್ಟದ ವಾಲಿಬಾಲ್, ಕ್ರಿಕೆಟ್, ಕಬಡ್ಡಿ ಪಂದ್ಯಾವಳಿಗಳು ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೇರಳಂ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ತಂಡಗಳು ಭಾಗವಹಿಸಿದ್ದರಿಂದ ಪಂದ್ಯಾವಳಿಗೆ ರಾಷ್ಟ್ರಮಟ್ಟದ ಸ್ವರೂಪ ದೊರೆಯಿತು.


ದಸರಾ ಮಹೋತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದ್ದು, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಪಾಲಾಕ್ಷಪ್ಪ ಗುಂಗಾಡಿ ''''ಕನ್ನಡಪ್ರಭ''''ಕ್ಕೆ ತಿಳಿಸಿದರು.