ಘಟ್ಟ ಸ್ಥಾಪನೆ ಹಾಗೂ ಮಂಗಳವಾದ್ಯಗಳ ನಿನಾದದೊಂದಿಗೆ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿ ದೇವಸ್ಥಾನದ ದಸರಾ ಮಹೋತ್ಸವ ಭಾನುವಾರ ಸಂಜೆ ಸಂಭ್ರಮದಿಂದ ಆರಂಭಗೊಂಡಿತು.

ಮುನಿರಾಬಾದ್: ಘಟ್ಟ ಸ್ಥಾಪನೆ ಹಾಗೂ ಮಂಗಳವಾದ್ಯಗಳ ನಿನಾದದೊಂದಿಗೆ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿ ದೇವಸ್ಥಾನದ ದಸರಾ ಮಹೋತ್ಸವ ಭಾನುವಾರ ಸಂಜೆ ಸಂಭ್ರಮದಿಂದ ಆರಂಭಗೊಂಡಿತು.

ದಸರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಒಂದು ಕಿ.ಮೀ. ಉದ್ದದ ರಾಜಬೀದಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಇಡೀ ರಾಜಬೀದಿ ಬೆಳಕಿನ ವೈಭವದಿಂದ ಕಂಗೊಳಿಸಿತು. ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಪ್ರಗತಿಪರ ರೈತ ಮಹಿಳೆಗೆ ಸನ್ಮಾನ: ದೇವಸ್ಥಾನದ ಸುಮಾರು 800 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ರಾವ್, ಸಹಾಯಕ ಕಾರ್ಯದರ್ಶಿ ಬಸವರಾಜ್ ಜಿರಾಳ ಹಾಗೂ ಸಮಿತಿಯ ಸದಸ್ಯರು ಕವಿತಾ ಮಿಶ್ರಾ ಅವರನ್ನು ಗೌರವಿಸಿದರು.

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಚಾಲನೆ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮುದ್ರಿಸಿದ ಆಮಂತ್ರಣ ಪತ್ರಿಕೆಯಲ್ಲಿ ಜನಪ್ರತಿನಿಧಿಗಳ ಹೆಸರುಗಳನ್ನು ಕೈಬಿಡಲಾಗಿತ್ತು. ಇದೇ ಕಾರಣದಿಂದ ಜನಪ್ರತಿನಿಧಿಗಳು ದಸರಾ ಮಹೋತ್ಸವದಲ್ಲಿ ಭಾಗವಹಿಸಲಿಲ್ಲ.

ಸಾಮಾನ್ಯವಾಗಿ ಸ್ಥಳೀಯ ಶಾಸಕರು ಘಟ್ಟ ಸ್ಥಾಪನೆ ನೆರವೇರಿಸುವುದು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸುವುದು ವಾಡಿಕೆ. ಆದರೆ ಈ ಬಾರಿ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರವೇ ಘಟ್ಟ ಸ್ಥಾಪನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿತು.

ಕ್ರೀಡೆಗಳಿಗೆ ವಿಶೇಷ ಆದ್ಯತೆ: ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಧಾರ್ಮಿಕ ಪೂಜೆಗಳು, ಹೋಮ-ಹವನಗಳು, ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಬಾರಿ ಕ್ರೀಡೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ.

ಪುರುಷರಿಗಾಗಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ, ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಸ್ಪರ್ಧೆ ಹಾಗೂ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ರಾವ್ ತಿಳಿಸಿದರು.

ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಈರಣ್ಣ, ಪಾಲಾಕ್ಷಪ್ಪ ಗುಂಗಾಡಿ, ವೆಂಕಟೇಶ್, ಶರಣಗೌಡ ಪಾಟೀಲ, ಮಾಜಿ ಅಧ್ಯಕ್ಷ ವೀರೇಶ್ ಉಪಸ್ಥಿತರಿದ್ದರು.