ಸಾರಾಂಶ
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಹಾಗೂ ತುಲಾ ಸಂಕ್ರಮಣ ಜಾತ್ರೆ ಮರುದಿನ ಕುಶಾಲನಗರ ಸಮೀಪ ಹುಲುಗುಂದ ಬಳಿಯ ಹಾರಂಗಿ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಹಾಗೂ ತುಲಾ ಸಂಕ್ರಮಣ ಜಾತ್ರೆ ಮರುದಿನ ಕುಶಾಲನಗರ ಸಮೀಪ ಹುಲುಗುಂದ ಬಳಿಯ ಹಾರಂಗಿ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು.ಅಣೆಕಟ್ಟು ಆವರಣದಲ್ಲಿರುವ ಕಾವೇರಿ ಪ್ರತಿಮೆಗೆ ಶಾಸಕ ಡಾ. ಮಂತರ್ ಗೌಡ, ಅರಕಲಗೂಡು ಶಾಸಕ ಎ. ಮಂಜು, ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಬಳಿಕ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಬಳಿಕ ಮಾತನಾಡಿದ ಶಾಸಕ ಮಂತರ್ ಗೌಡ, ಹಾರಂಗಿ ಎಡದಂಡೆ ಮುಖ್ಯ ನಾಲೆ ಸಂಪರ್ಕಿಸುವ 6.87 ಕಿ.ಮೀ.ನಿಂದ 14.75 ಕಿ.ಮೀ.ವರೆಗೆ ಕಾಂಕ್ರೀಟಿಕರಣ ಮಾಡಲು ಸರ್ಕಾರದಿಂದ 72 ಕೋಟಿ ರು. ಬಿಡುಗಡೆಯಾಗಿದೆ. ಈ ಸಂಬಂಧ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ತಾಂತ್ರಿಕ ಬಿಡ್‍ಗೆ ಅನುಮೋದನೆ ದೊರೆತಿದೆ. ಜನವರಿ ತಿಂಗಳಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಹಾರಂಗಿ ಅಚ್ಚುಕಟ್ಟು ಪ್ರದೇಶ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆ ಮಾಡಿದಲ್ಲಿ ನದಿಯನ್ನು ಉಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಹಾರಂಗಿ ಜಲಾಶಯದ ಹೂಳೆತ್ತುವ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಹಿನ್ನೆಲೆಯಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಮುಂದಿನ ದಿನಗಳಲ್ಲಿ ಯೋಜನಾ ಕಾಮಗಾರಿ ಮುಂದುವರಿಯಲಿದೆ ಎಂದರು.ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಹಾರಂಗಿ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಚೌಡೇಗೌಡ, ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ರಘುಪತಿ, ಹಾರಂಗಿ ಅಣೆಕಟ್ಟು ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ತಹಸೀಲ್ದಾರ್ ಕಿರಣ್ ಗೌರಯ್ಯ, ಸಹಾಯಕ ಎಂಜಿನಿಯರ್ ಕಿರಣ್ ದೇವಯ್ಯ, ಸಿದ್ದರಾಜು, ಸೌಮ್ಯ, ಸಂಧ್ಯಾ, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷ ಭಾಸ್ಕರ ನಾಯ್ಕ್, ಹಾರಂಗಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.