ಸಾರಾಂಶ
ಕನ್ನಡಪ್ರಭವಾರ್ತೆ ಚಳ್ಳಕೆರೆ
ರಾಜ್ಯ ಸರ್ಕಾರ ಜನತೆಯ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದೆ. ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.ತಾಲೂಕು ಪಂಚಾಯಿತಿ ಕಾರ್ಯಾಲಯದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು, ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಇದೇ ಮೊದಲ ಬಾರಿಗೆ ಇಂತಹ ಬೃಹತ್ ಅಂದೋಲನ ರೂಪಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಲಿದೆ. ಚುನಾಯಿತ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಯುವಕರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟೇಶ್, ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಜಿಲ್ಲೆಯಲ್ಲಿ ಹೆಚ್ಚು ಯಶಸ್ಸು ಕಾಣಬೇಕಿದೆ. ಸರ್ಕಾರದ ನಿಯಮಗಳ ಪ್ರಕಾರ ಒಟ್ಟು 110 ಕಿ.ಮೀ ವ್ಯಾಪ್ತಿಯಲ್ಲಿ ಮಾನವ ಸರಪಳಿ ನಿರ್ಮಿಸಲಾಗುವುದು. ಪ್ರತಿ ಕಿ.ಮೀಗೆ 850 ರಂತೆ ಒಟ್ಟು 95ಸಾವಿರ ಜನ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಸೆ.15ರ ಭಾನುವಾರ ಬೆಳಗ್ಗೆ ಈ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಒಟ್ಟು 95 ಸಾವಿರ ಜನ ಕಾರ್ಯಕ್ರಮಲ್ಲಿ ಭಾಗವಹಿಸುವರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರಿ ರಜೆ ಎಂದು ಯಾವ ಅಧಿಕಾರಿ, ಸಿಬ್ಬಂದಿ ವರ್ಗ ಗೈರಾಗದೆ ತಪ್ಪದೆ ಮಹತ್ತರ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್, ಉಪವಿಭಾಗಾಧಿಕಾರಿ ಎಂ. ಕಾರ್ತಿಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತಹಸೀಲ್ದಾರ್ ರೇಹಾನ್ ಪಾಷ, ಇಒ ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.