ಸಾರಾಂಶ
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ನವೀನ್ ಕುಮಾರ್ ಸೂಚನೆ
ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಂದು ಚಿಕ್ಕಮಗಳೂರು ತಾಲೂಕಿನ ಮಾಗಡಿಯಿಂದ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯವರೆಗೆ 90 ಸಾವಿರ ಜನ ಸೇರಿ ಮಾನವ ಸರಪಳಿ ರಚಿಸಬೇಕಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ತಿಳಿಸಿದರು.ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಗುತ್ತಿದ್ದು, ಶಾಲಾ ಮಕ್ಕಳನ್ನು ಶಿಕ್ಷಣ ಇಲಾಖೆಯವರು ಕರೆತರಬೇಕು. ಇದಕ್ಕೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಅಧ್ಯಕ್ಷರು ಈ ಕುರಿತು ಸಭೆ ನಡೆಸಿ ಗ್ರಾಪಂ ಸದಸ್ಯರನ್ನು, ಸಾರ್ವಜನಿಕರನ್ನು ಕರೆತರಬೇಕು. ರಾಜ್ಯಾದ್ಯಂತ ಮಾನವ ಸರಪಳಿ ರಚಿಸಿ ಏಕಕಾಲಕ್ಕೆ ಸಂವಿಧಾನ ಪೀಠಿಕೆ ಓದಿ ದಾಖಲೆ ನಿರ್ಮಿಸಲಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಕುರಿತು ಹೆಚ್ಚಿನ ಅರಿವು ಮೂಡಿಸಲು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎ.ಕೆ.ಪಾಟೀಲ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಸಹಕಾರ ಸಂಘದ ಪ್ರತಿನಿಧಿಗಳನ್ನು ಕರೆ ತರಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಕಳಿಸಲಾಗಿದ್ದು, ಶಾಲೆಯಲ್ಲಿ ಅಭ್ಯಾಸ ಮಾಡಿಸಲಾಗುತ್ತಿದೆ. ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಮೊಬೈಲ್‌ನಲ್ಲಿ ನೋಡಿ ಹೇಳಬಹುದು. ಕಾರ್ಯಕ್ರಮದ ಬಗ್ಗೆ ಈಗಾಗಲೇ ಆನ್‌ಲೈನ್ ನಲ್ಲಿ ನೋಂದಾಯಿಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಲಿಂಕ್ ಕಳಿಸಿಕೊಡಲಾಗುವುದು. ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ಹಾಗೂ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ತಸೀಲ್ದಾರ್ ತನುಜ ಮಾತನಾಡಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಸ್ವಇಚ್ಛೆಯಿಂದ ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಪಂ ಅಧ್ಯಕ್ಷೆ ಸುರೈಯಾಭಾನು, ಉಪಾಧ್ಯಕ್ಷೆ ಉಮಾ ಕೇಶವ್, ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷ ಸುನೀಲ್, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ನಿರಂಜನಮೂರ್ತಿ, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ವೆಂಕಟೇಶ್, ಭವಾನಿ ಮತ್ತಿತರರು ಇದ್ದರು.