ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಬೇಕೆಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್‌ಭಟ್ ಹೇಳಿದರು.
ಹುಬ್ಬಳ್ಳಿ:
ಮರ್ಯಾದಾ ಹತ್ಯೆ ಪ್ರಕರಣ ನಡೆದ ಇನಾಂವೀರಾಪುರ ಗ್ರಾಮಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಮಂಗಳವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯರು ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಈ ಕುರಿತು ಸರ್ಕಾರಕ್ಕೆ ಶೀಘ್ರದಲ್ಲಿಯೇ ವರದಿ ಸಲ್ಲಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.
ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲು ಸೂಚಿಸಿದರು.ಇದೇ ವೇಳೆ ಗ್ರಾಮ ಬಿಟ್ಟು ಹೋಗದೇ ಇಲ್ಲೇ ವಾಸಿಸಿ. ಸರ್ಕಾರದಿಂದ ಭದ್ರತೆ ಒದಗಿಸುವಂತೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಈ ಪ್ರಕರಣದ ಕುರಿತು ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು, ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಪರವಾಗಿ ವಿಶೇಷ ಅಭಿಯೋಜಕರನ್ನು ನೇಮಿಸಲು, ವಿಶೇಷ ಪರಿಹಾರ ನೀಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಈ ವೇಳೆ ಆಯೋಗದ ಸದಸ್ಯ ಎಸ್.ಕೆ. ವಂಟಿಗೊಡಿ, ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಡಿವೈಎಸ್‍ಪಿ ವಿನೋದ ಮುಕ್ತೆದಾರ, ತಹಸೀಲ್ದಾರ್ ಜಿ.ಆರ್. ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುರಗೇಶ ಚನ್ನಣ್ಣನವರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವೇಕಾನಂದ ದೊಡಮನಿ ಕುಟುಂಬದ ಸದಸ್ಯರು ಇದ್ದರು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.