ಪಂಚಮಸಾಲಿ ಸಮಾಜ ಸೇರಿದಂತೆ ಲಿಂಗಾಯತ ಉಪ ಸಮಾಜಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಹಾವೇರಿ: ಪಂಚಮಸಾಲಿ ಸಮಾಜ ಸೇರಿದಂತೆ ಲಿಂಗಾಯತ ಉಪ ಸಮಾಜಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತರಲ್ಲಿ ಪಂಚಮಸಾಲಿ ಸಮಾಜ ಅತಿ ದೊಡ್ಡ ಸಮಾಜವಾಗಿದೆ. ಮಕ್ಕಳ ಶಿಕ್ಷಣ ಮತ್ತು ಯುವಕರ ಉದ್ಯೋಗದ ದೃಷ್ಟಿಯಿಂದ ರಾಜ್ಯ ಸರಕಾರದ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪಸಮಾಜಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ನೀಡಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂಬ ಬೇಡಿಕೆಯೊಂದಿಗೆ ಕಳೆದ ಆರು ವರ್ಷಗಳಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ ಎಂದರು.

ಹಿಂದಿನ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯರ ಅಧಿಕಾರವಧಿಯಲ್ಲಿ ಸಾಕಷ್ಟು ಹೋರಾಟ, ಮನವಿ ಸಲ್ಲಿಕೆ, ಪಾದಯಾತ್ರೆ, ಧರಣಿ ಸತ್ಯಾಗ್ರಹ ನಡೆಸಿದ್ದರೂ ಸಹಿತ ಯಾವುದೇ ಪ್ರಯೋಜನವಾಗಿಲ್ಲ. ಈ ಸರಕಾರಗಳು ಕೇವಲ ಆಶ್ವಾಸನೆ ನೀಡುತ್ತಲೇ ಕಾಲಹರಣ ಮಾಡುತ್ತಿವೆ ಎಂದು ಆರೋಪಿಸಿದ ಅವರು, ರಾಜ್ಯ ಸರಕಾರ 2ಎ ಮೀಸಲಾತಿ ಪ್ರಮಾಣಪತ್ರದ ಆದೇಶಪ್ರತಿಯನ್ನು ನೀಡುವವರೆಗೂ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ. ಹೊಸ ಸರಕಾರದ ಗಮನ ಸೆಳೆಯಲು ಎಂಟನೇ ಹಂತದ ಭಾಗ-2ರ ಚಳವಳಿ ಹಮ್ಮಿಕೊಂಡಿದೆ ಎಂದರು.

ರಾಜ್ಯದಲ್ಲಿ ಇದೀಗ ಡಿ.ಕೆ. ಶಿವಕುಮಾರ ಹೊಸ ಮುಖ್ಯಮಂತ್ರಿಗಳಾಗಿದ್ದಾರೆ. ಹೊಸ ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಸಭೆ ಕರೆದು ಚರ್ಚೆ ನಡೆಸಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಮೊದಲ ವಾರದಲ್ಲೇ ಭೇಟಿ ಮಾಡಿದಾಗ, ಜಾತಿ ಆಧಾರಿತ ಮೀಸಲಾತಿ ಕುರಿತು ಆರು ತಿಂಗಳೊಳಗೆ ಸಭೆ ಕರೆಯುವ ಭರವಸೆ ನೀಡಿದ್ದರು. ಆದರೆ, ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದೆರಡು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವಾಗ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಹಾಗೂ ಹಲ್ಲೆ ನಡೆಸಿದ್ದನ್ನು ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಬರುವ ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು `ಸೂರ್ಯ ಹುಟ್ಟಿದಾಗಿನಿಂದ ಸೂರ್ಯ ಮುಳುಗುವವರೆಗೂ'''''''' ಎಂಬ ಶೀರ್ಷಿಕೆಯಡಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಉತ್ತರ ಕರ್ನಾಟಕ ಸೇರಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 20ರಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸರಕಾರಕ್ಕೆ ಸಮಾಜದ ಬೇಡಿಕೆಗಳ ಕುರಿತು ಎಚ್ಚರಿಕೆ ನೀಡುವ ಉದ್ದೇಶದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಮಾಜದ ಪ್ರತಿಯೊಂದು ಮನೆಯಿಂದ ಒಬ್ಬರು ಪಂಚಮಸಾಲಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಪ್ರತಿ ಊರಿನಿಂದ ಒಂದು ವಾಹನದಲ್ಲಿ ಜನರು ಬೆಳಗಾವಿಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಡಾ. ಬಸವರಾಜ ವೀರಾಪುರ, ಸಿದ್ದಣ್ಣ ಚಿಕ್ಕಬಿದರಿ, ದಾನಪ್ಪ ಕೆಂಗೊಂಡ, ಬಸವರಾಜ ಹಾಲಪ್ಪನವರ, ಶಿವಾನಂದ ಬಾಗೂರ, ಪರಮೇಶ್ವರಪ್ಪ ಹಲಗೇರಿ, ಶಿವಯೋಗಿ ಗಡಾದ, ಎ.ಬಿ. ಪಾಟೀಲ, ಮಾಲತೇಶ ಸೊಪ್ಪಿನ, ಬಸವರಾಜ ಗಡೆಕಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.