ನಾನೆಂದೂ ಕಾರ್ಯಕರ್ತರ ಪರ: ಲಕ್ಷ್ಮೀ ಹೆಬ್ಬಾಳ್ಕರ್‌

| Published : Jan 28 2024, 01:15 AM IST

ಸಾರಾಂಶ

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಉದುಪಿ ಉಸ್ತುವಾರಿ ಸಚಿವೆ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ ನಾನೆಂದೂ ಕಾರ್ಯಕರ್ತರ ಪರ, ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ‌. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಒಂದು ಕುಟುಂಬ, ಒಂದು ಪರಿವಾರ ಇದ್ದಂತೆ ಎಂದು ಹೇಳಿದರು. ನಾನು ಕೂಡ ತಳಮಟ್ಟದಿಂದ ಬೆಳೆದು ಇಂದು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. 2013ರ ವಿಧಾನಸಭೆ, 2014ರ ಲೋಕಸಭಾ ಚುನಾವಣೆಯಲ್ಲಿ ಸೋತರೂ ಎದೆಗುಂದದೆ 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ನನ್ನನ್ನು 52 ಸಾವಿರ ಮತಗಳಿಂದ ಗೆಲ್ಲಿಸಿದರು. 2023ರಲ್ಲಿ 56 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಾವು ಸೋತಿರಬಹುದು. ಎದೆಗುಂದದೆ ಎಲ್ಲರೂ ಒಗ್ಗೂಡಿ ಪಕ್ಷ ಕಟ್ಟೋಣ ಎಂದು ಸಚಿವರು ಕಾರ್ಯಕರ್ತರಿಗೆ ಕರೆ ನೀಡಿದರು. ಕಾರ್ಯಕರ್ತರ ನೇರ ಭೇಟಿ: ನಾನು ಉಡುಪಿ ಜಿಲ್ಲೆಗೆ ಇದುವರೆಗೂ 19 ಬಾರಿ ಭೇಟಿ ನೀಡಿರುವೆ. ಮುಂದಿನ ಭೇಟಿ ವೇಳೆ ಒಂದು ಗಂಟೆ ಕಾರ್ಯಕರ್ತರ ಭೇಟಿಗೆ ಮೀಸಲಿಡುವೆ ಎಂದು ಸಚಿವೆ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದವರು ಕಾರ್ಯಕರ್ತರಿಗೆ ಕರೆ ನೀಡಿದರು.

ತಪ್ಪಿತಸ್ಥರ ರಕ್ಷಣೆ ಇಲ್ಲ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನ ಕಳಪೆ ಕಾಮಗಾರಿ ವಿಚಾರವಾಗಿ ಮಾತನಾಡಿದ ಸಚಿವರು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುವರು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.