ಹುಬ್ಬಳ್ಳಿ:
ನಾನಂತೂ ವಿದೇಶ ಪ್ರವಾಸಕ್ಕೆ ಹೊರಟಿಲ್ಲ. ಯಾರಾದರೂ ಹೊರಟಿದ್ದರೆ ಅದು ಅವರ ವೈಯಕ್ತಿಕ ಖರ್ಚಿನಲ್ಲಿ ಹೊರಟಿರಬಹುದು. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ, ಸಚಿವರ ವಿದೇಶ ಪ್ರವಾಸಕ್ಕೆ ಹೋಗುತ್ತಿರುವ ಕುರಿತು ನನಗೂ ಮಾಹಿತಿಯಿದೆ. ಸಚಿವರು, ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವುದು ಸಾಮಾನ್ಯ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.ಬಜೆಟ್ ಬಳಿಕ ಸಂಪುಟ ಪುನಾರಚನೆ:
ಬಜೆಟ್ ನಂತರ ಮುಖ್ಯಮಂತ್ರಿ ಬದಲಾವಣೆ ಎಂಬುದು ಸತ್ಯಕ್ಕೆ ದೂರವಾದದ್ದು. ಆದರೆ, ಸಚಿವ ಸಂಪುಟ ಪುನರ್ ರಚನೆ ಆಗುವ ಬಗ್ಗೆ ನಮಗೆ ಮಾಹಿತಿ ಇದೆ. ಅದೂ ವರಿಷ್ಠರ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ. ಅದನ್ನು ಸಹಿಸಲಾಗದೇ ವಿರೋಧ ಪಕ್ಷದವರು ಇಲ್ಲ ಸಲ್ಲದ ಸುಳ್ಳು ಸುದ್ದಿ ಹರಿಬಿಡುತ್ತಿದ್ದಾರೆ. ಅಭಿವೃದ್ಧಿಯ ಹೊರತಾಗಿ ನಮಗೆ ಬೇರೇನೂ ಕಾಣಿಸುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲವೂ ಚೆನ್ನಾಗಿಯೇ ನಡೆದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸ್ಪೀಕರ್ ಓಂ ಬಿರ್ಲಾ ಅವರು ನಡೆದುಕೊಂಡ ರೀತಿ ಸಂವಿಧಾನಕ್ಕೆ ವಿರುದ್ಧವಾದದ್ದು. ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶವನ್ನೇ ನೀಡದೇ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೈಗೊಂಬೆಯಂತೆ ವರ್ತಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಗುರುವಾರ ಅವಿಶ್ವಾಸ ನಿರ್ಣಯ ಕೈಗೊಳ್ಳಲಾಗಿದೆ. ಸ್ಪೀಕರ್ ಹುದ್ದೆ ಅಲಂಕರಿಸಿದವರು ಯಾವುದೇ ಪಕ್ಷಕ್ಕೆ ಸೀಮಿತವಾಗಿರಬಾರದು. ಪಕ್ಷಾತೀತವಾಗಿ ನಡೆದುಕೊಳ್ಳಬೇಕು. ಆದರೆ, ಓಂ ಬಿರ್ಲಾ ಅವರ ನಡೆ ಬೇಸರ ಮೂಡಿಸಿದೆ ಎಂದರು.