ಸಾರಾಂಶ
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು.
ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು ಎಂದು ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.
ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ.
ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದೂ ಹೇಳಿದ್ದಾರೆ.
ದೇವರು, ಧರ್ಮ, ಪೂಜೆ, ಆರಾಧನೆಗಳೆಲ್ಲ ವೈಯಕ್ತಿಕ. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು ಹಾಗೂ ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮದ ಅನುಯಾಯಿಗಳಿಗೂ ಅನ್ವಯಿಸುತ್ತದೆ ಎಂದಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))