ಸಾರಾಂಶ
ಪಿಡಿಒಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ಇರುವುದರಿಂದ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ತೀವ್ರ ಅಡಚಣೆ ಉಂಟಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರುತ್ತಿದ್ದು, ತಮ್ಮ ಇಲಾಖೆ ಸಂಬಂಧಿಸಿದ ಪ್ರಶ್ನೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಕರ್ತವ್ಯದ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಪಿಡಿಒಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ಇರುವುದರಿಂದ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ತೀವ್ರ ಅಡಚಣೆ ಉಂಟಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.ತಾಲೂಕಿನ ಕಣಕಟ್ಟೆ ಹೋಬಳಿಯಲ್ಲಿ ಶನಿವಾರ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಶಿವಲಿಂಗೇಗೌಡರು, ಹೋಬಳಿ ಮಟ್ಟದಲ್ಲಿ ಇಂಥ ಜನಸಂಪರ್ಕ ಸಭೆಗಳನ್ನು ನಡೆಸುತ್ತಿರುವುದು, ನೊಂದ ಜನರ ಸಮಸ್ಯೆಗಳನ್ನು ನೇರವಾಗಿ ಕೇಳಿ ಸ್ಥಳದಲ್ಲೇ ಬಗೆಹರಿಸುವ ಉದ್ದೇಶದಿಂದ ಎಂದು ಹೇಳಿದರು. ಈ ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರುತ್ತಿದ್ದು, ತಮ್ಮ ಇಲಾಖೆ ಸಂಬಂಧಿಸಿದ ಪ್ರಶ್ನೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಕರ್ತವ್ಯದ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ನಿವೇಶನ ಮತ್ತು ಆಶ್ರಯ ಮನೆಗಳ ವಿಷಯದಲ್ಲಿ ಹೆಚ್ಚು ದೂರುಗಳು ಬಂದಿದ್ದು, ಇತ್ತೀಚಿನ ದಿನಗಳಲ್ಲಿ ಪಿಡಿಒಗಳ ಕಾರ್ಯಪದ್ಧತಿಯು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ದೋಷ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಹೆಚ್ಚು ಶ್ರಮವಹಿಸಿ, ಜನಪರವಾಗಿ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಭೆಯ ಸಂದರ್ಭದಲ್ಲಿ, ಹೋಬಳಿ ಸುತ್ತಮುತ್ತಲಿರುವ ರೈತರಿಗೆ ಸಾಗುವಳಿ ಪತ್ರಗಳು ವಿತರಿಸಲಾಯಿತು. ಅಲ್ಲದೆ, ವಿದ್ಯುತ್ ಸಂಪರ್ಕದ ಕುರಿತು ಬಂದಿರುವ ದೂರುಗಳ ಕುರಿತಂತೆ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಶೇಖರ್, ತಹಸೀಲ್ದಾರ್ ಸಂತೋಷ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಗಂಗಣ್ಣ, ಬಿಇಒ ಮೋಹನ್ ಕುಮಾರ್, ಕಣಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಮ್ಮ, ಮಾಡಾಳು ಗ್ರಾಪಂ ಅಧ್ಯಕ್ಷ ಯೋಗೀಶ್, ಮುಖಂಡರಾದ ರಾಂಪುರ ಸುರೇಶ್, ಹನುಮಪ್ಪ, ಕಣಕಟ್ಟೆ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಸತೀಶ, ಮಲ್ಲೇಶಪ್ಪ, ರಂಗನಾಥ್, ಸದಸ್ಯರಾದ ಪ್ರಜ್ವಲ್, ಅತಿಖ್ , ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.