ಕೊಪ್ಪಳ ನಗರದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ-2026ರ ವಿವಿಧ ಸ್ಪರ್ಧೆಗಳಿಗೆ ಸಸಿಗೆ ನೀರೆರೆಯುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಮರೇಶ್ ಹಾವಿನ್ ಚಾಲನೆ ನೀಡಿದರು.
ಕೊಪ್ಪಳ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಬಾಲ್ಯದಲ್ಲಿಯೇ ಕಲೆ ಮತ್ತು ಸೃಜನಶೀಲತೆ ಬೆಳೆಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಮರೇಶ್ ಹಾವಿನ್ ಹೇಳಿದರು.
ನಗರದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ-2026ರ ವಿವಿಧ ಸ್ಪರ್ಧೆಗಳಿಗೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಭವಿಷ್ಯದಲ್ಲಿ ಉತ್ತಮ ಕಲಾವಿದರಾಗಲು ಸಾಧ್ಯ. ಮಕ್ಕಳ ದಿನಾಚರಣೆ ಅಂಗವಾಗಿ ಪ್ರತಿವರ್ಷ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಪ್ರದರ್ಶನ ಕಲೆ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸೇರಿದಂತೆ ವಿಶೇಷವಾಗಿ ಅಂಗವಿಕಲ ಮತ್ತು ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಬದರಿ ಪ್ರಸಾದ್ ಪಿ.ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ನಟರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣಾ ಕುಬಕಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ್, ಬಾಲಕರ ಬಾಲಮಂದಿರದ ಅಧೀಕ್ಷಕ ಕೃಷ್ಣ ಬಾಕಳೆ ಉಪಸ್ಥಿತರಿದ್ದರು.
ಕಾತರಗಿ-ಗುಟ್ಲನೂರು ಸರ್ಕಾರಿ ಪ್ರೌಢಶಾಲೆಯ ವೆಂಕಟೇಶ ಕಬಾಡಿ, ಕವಲೂರು ಸರ್ಕಾರಿ ಪ್ರೌಢಶಾಲೆಯ ವೀರಯ್ಯ ಹಾಗೂ ಕೊಪ್ಪಳ ಬಾಲಕಿಯರ ಪದವಿಪೂರ್ವ ಕಾಲೇಜಿನ ರಾಜ್ ಮಹಮ್ಮದ್ ಸ್ಪರ್ಧೆಗಳ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.