ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು, ಕಠಿಣ ಪರಿಶ್ರಮದಿಂದ ಸಾಗಬೇಕು.

ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಶಿರಸಿ

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು ಶೈಕ್ಷಣಿಕ, ಸಾಮಾಜಿಕವಾಗಿ ಮುಂದೆ ಬಂದು ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (ಜಿಲ್ಲಾ ಶಾಖೆ-ಶಿರಸಿ) ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಪ್ರಮುಖವಾದದ್ದು. ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು, ಕಠಿಣ ಪರಿಶ್ರಮದಿಂದ ಸಾಗಬೇಕು. ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮಕ್ಕಳ ಈ ಸಾಧನೆಯ ಹಿಂದೆ ಪೋಷಕರ ತ್ಯಾಗ ಮತ್ತು ಶಿಕ್ಷಕರ ನಿರಂತರ ಶ್ರಮ ಅಡಗಿದೆ ಎಂದು ಶ್ಲಾಘಿಸಿದರು.

ಸರ್ಕಾರಿ ನೌಕರರು ನಮ್ಮ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಹಗಲು ರಾತ್ರಿ ಎನ್ನದೆ ನಿರಂತರವಾಗಿ ಕೆಲಸ ಮಾಡಿರುವುದಲ್ಲದೆ ಮತ್ತು ಎಸ್ಐಆರ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹಾಗಾಗಿ ಕರ್ನಾಟಕ ರಾಜ್ಯ ನೌಕರರ ಸಹಕಾರ ಸಂಘ ಸರ್ಕಾರದ ಜೊತೆಗೆ ಯಾವತ್ತೂ ಇರಬೇಕು ಅಂದಾಗ ಮಾತ್ರ ಆಡಳಿತ ಯಂತ್ರಕ್ಕೆ ವೇಗ ಬಂದಂತಾಗುತ್ತದೆ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

ಅಲ್ಲದೆ ಕರ್ನಾಟಕ ರಾಜ್ಯ ನೌಕರರ ಸಂಘ ಶಿರಸಿ ಶಾಖೆಗೆ ₹30 ಲಕ್ಷ ಅನುದಾನ ನೀಡುವುದಾಗಿ ಶಾಸಕರು ವೇದಿಕೆಯಲ್ಲಿ ಭರವಸೆ ನೀಡಿದರು.

ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಡಿ.ಪಿ. ಹೆಗಡೆ ಸ್ವಾಗತಿಸಿದರು. ದಿವಾಕರ್ ಮರಾಠೆ ನಿರೂಪಿಸಿದರು.