ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಜಲಮೂಲ ಗುರುತಿಸಿ: ಜಿಲ್ಲಾಧಿಕಾರಿ ವೆಂಕಟೇಶ್

| Published : Feb 14 2024, 02:20 AM IST

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಜಲಮೂಲ ಗುರುತಿಸಿ: ಜಿಲ್ಲಾಧಿಕಾರಿ ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಆರು ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಣೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಆಯಾ ಕ್ಷೇತ್ರ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಎಲ್ಲೆಲ್ಲಿ ನೀರಿನ ಮೂಲಗಳಿವೆ, ಪೈಪ್‍ಲೈನ್ ವಿಸ್ತರಣೆ, ಬೋರ್‌ವೆಲ್‌ ದುರಸ್ತಿ, ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ಕೂಲಕಂಕಷವಾಗಿ ಚರ್ಚಿಸಬೇಕು. ನೀರಿನ ಸಮಸ್ಯೆಯಾಗದಂತೆ ಖಾಸಗಿ ಬೋರ್‌ವೆಲ್‍ಗಳನ್ನು ಗುರುತಿಸಿಟ್ಟುಕೊಂಡಿರಬೇಕು. ಮಾಲೀಕರ ಮನವೊಲಿಸಿ ಬಾಡಿಗೆ ನಿಗದಿಪಡಿಸಬೇಕು. ಅಂತಹ ಕೊಳವೆ ಬಾವಿಗಳಿಗೆ ಅಗತ್ಯವಿದ್ದರೆ ಪೈಪ್‍ಲೈನ್ ಮಾಡಿಕೊಳ್ಳಬಹುದು. ಒಂದು ವೇಳೆ ನೀರು ಲಭ್ಯವಾಗದೇ ಇರುವ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಕೊನೆ ಆದ್ಯತೆಯಾಗಬೇಕು ಎಂದು ಹೇಳಿದರು.

ಚಳ್ಳಕೆರೆ ತಾಪಂ ಇಒ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಅಲ್ಪಮಟ್ಟಿಗೆ ಕುಸಿದಿದೆ. ಈಗಾಗಲೆ 53 ಹಳ್ಳಿಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳು ಎಂದು ಗುರುತಿಸಲಾಗಿದೆ. 18 ಹಳ್ಳಿಗಳಿಗೆ ಖಾಸಗಿ ಬೋರ್‌ವೆಲ್ ಗಳನ್ನು ಗುರುತಿಸಲಾಗಿದೆ. ಇದರಲ್ಲಿಯೂ ನೀರು ಕಡಿಮೆಯಾಗುವ ಸಂಭವ ಇದೆ. ಇನ್ನೂ 14 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡುವ ಪರಿಸ್ಥಿತಿ ಬರಬಹುದು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಗಂಭೀರವಾದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ. ಒಟ್ಟಾರೆಯಾಗಿ ಕುಡಿಯುವ ನೀರು ಪೂರೈಕೆ ಮಾಡಲೇಬೇಕು. ಪ್ರತಿ ತಾಲೂಕಿಗೆ ತುರ್ತು ಕಾರ್ಯಗಳಿಗಾಗಿ 40 ಲಕ್ಷ ರು. ಅನುದಾನ ಒದಗಿಸಲಾಗಿದೆ ಎಂದರು. ಅಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ತುರ್ತಾಗಿ ಅಗತ್ಯವಿರುವೆಡೆ ತಹಸಿಲ್ದಾರರ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವವರಿಗೆ ಟೆಂಡರ್‌ನಲ್ಲಿ ಅಂತಿಮವಾಗಿ ನಿಗದಿಯಾಗುವ ದರಕ್ಕೆ ಅನುಗುಣವಾಗಿ ಮೊತ್ತ ಪಾವತಿಸಲಾಗುವುದು ಎಂದರು.

ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಪೂರೈಸಲಾಗುವ ನೀರು, ನೀರಿನ ಸಂಗ್ರಹಾಗಾರಗಳಲ್ಲಿನ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆಗೆ ಒಳಪಡಿಸಬೇಕು. ನೀರು ಪೂರೈಕೆಯ ಪೈಪ್‍ಲೈನ್‌ ಮಾರ್ಗಗಗಳನ್ನು ಆಗಿಂದಾಗ್ಗೆ ಪರಿಶೀಲನೆ ನಡೆಸುತ್ತಿರಬೇಕು. ಕಲುಷಿತ ನೀರು ಕಾರಣದಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.289 ಸಮಸ್ಯಾತ್ಮಕ ಗ್ರಾಮಗಳು

ಮುಂಬರುವ ತಿಂಗಳುಗಳಲ್ಲಿ ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಚಳ್ಳಕೆರೆ ತಾಲೂಕಿನಲ್ಲಿ 53, ಚಿತ್ರದುರ್ಗ-44, ಹಿರಿಯೂರು-57, ಹೊಳಲ್ಕೆರೆ-53, ಹೊಸದುರ್ಗ-36 ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ 67 ಸಮಸ್ಯಾತ್ಮಕ ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿದೆ. ಈ ಸಂಖ್ಯೆಯು ದಿನದಿಂದ ದಿನಕ್ಕೆ ಬದಲಾಗುವ ಸಾಧ್ಯತೆಗಳಿವೆ. ಹಾಗಾಗಿ ಚಳ್ಳಕೆರೆ ತಾಲೂಕಿನಲ್ಲಿ 24, ಚಿತ್ರದುರ್ಗ-1, ಹಿರಿಯೂರು-54, ಹೊಳಲ್ಕೆರೆ-13 ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ 78 ಸೇರಿದಂತೆ ಒಟ್ಟು 170 ಬೋರ್‌ ವೆಲ್ ಳನ್ನು ಗುರುತಿಸಲಾಗಿದೆ. ಪೈಪ್‍ಲೈನ್ ಮತ್ತಿತರ ತುರ್ತು ಕಾರ್ಯಗಳಿಗಾಗಿ ಪ್ರತಿ ತಾಲೂಕಿಗೆ ತಲಾ 25 ಲಕ್ಷ ರು. ಅನುದಾನ ಒದಗಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪಾತಪ್ಪ, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ತಹಶೀಲ್ದಾರ್‍ಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಮುಖ್ಯಸ್ಥರು ಉಪಸ್ಥಿತರಿದ್ದರು.

------------

ನೀರಿನ ಸಮಸ್ಯಾತ್ಮಕ ಗ್ರಾಮಗಳುತಾಲೂಕುಗ್ರಾಮಗಳುಚಳ್ಳಕೆರೆ 53ಚಿತ್ರದುರ್ಗ44ಹಿರಿಯೂರು57ಹೊಳಲ್ಕೆರೆ53ಹೊಸದುರ್ಗ36ಮೊಳಕಾಲ್ಮುರು67--------------ಒಟ್ಟು289