ಮತದಾರರ ಪಟ್ಟಿಯಲ್ಲಿ ಅರ್ಹ ವ್ಯಕ್ತಿಗಳ ಹೆಸರು ಕೈಬಿಟ್ಟಿದ್ದರೆ ಕೂಡಲೇ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದು ಹೆಸರು ನೋಂದಾಯಿಸಿಕೊಳ್ಳಬೇಕು

ಬಳ್ಳಾರಿ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ–ಯುವತಿಯರು ಹಾಗೂ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಮತದಾರರ ಗುರುತಿನ ಚೀಟಿ ಪಡೆದು ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಹಾಗೂ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾನುವಾರ ನಗರದ ಎನ್ ಸಿಸಿ ಮೈದಾನದಲ್ಲಿ ಆಯೋಜಿಸಿದ್ದ

4 ಕಿಮೀ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಅರ್ಹ ವ್ಯಕ್ತಿಗಳ ಹೆಸರು ಕೈಬಿಟ್ಟಿದ್ದರೆ ಕೂಡಲೇ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದು ಹೆಸರು ನೋಂದಾಯಿಸಿಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಅರ್ಹ ಯುವಕರು ಅ.1ರಿಂದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಮ್ಯಾರಥಾನ್‌ನಲ್ಲಿ ಯುವಕರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ. ಇಂತಹ ಜಾಗೃತಿ ಕಾರ್ಯಕ್ರಮಗಳು ಮತದಾನದ ಮಹತ್ವ ಜನರಿಗೆ ತಲುಪಿಸುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಯುವಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಥಾನ್ ಆಯೋಜಿಸಲಾಗಿದೆ. ಅರ್ಹ ಯುವಕರು ಅ.1ರಿಂದ ತಮ್ಮ ಸಮೀಪದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಯೊಂದು ಮತಕ್ಕೂ ಮಹತ್ವವಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು ಚುನಾವಣೆಯಲ್ಲಿ ಭಾಗವಹಿಸುವುದು ಜವಾಬ್ದಾರಿಯುತ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಎನ್‌ಸಿಸಿ ಮೈದಾನದಿಂದ ಪ್ರಾರಂಭವಾದ ಓಟವು ಸುಧಾ ಕ್ರಾಸ್, ಇನ್‌ಫೆಂಟ್ರಿ ರಸ್ತೆ, ಎಸ್‌ಪಿ ವೃತ್ತದ ಮಾರ್ಗವಾಗಿ ಸಾಗಿ ದುರ್ಗಮ್ಮ ದೇವಸ್ಥಾನದ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.

ಓಟದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್., ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.