ಕೆಲಸ ಮಾಡದಿದ್ರೆ ನಾವೇ ಕ್ರಮಕೈಗೊಳ್ಳಬೇಕಾಗುತ್ತೆ

| Published : Oct 10 2024, 02:19 AM IST

ಕೆಲಸ ಮಾಡದಿದ್ರೆ ನಾವೇ ಕ್ರಮಕೈಗೊಳ್ಳಬೇಕಾಗುತ್ತೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ತಿನ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಹಲವಾರು ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಿಜಯಪುರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಸಿಂದಗಿ

ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ತಿನ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಹಲವಾರು ದೂರುಗಳು ಬಂದಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಿಜಯಪುರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ, ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆ ಶಾಲಾ ಮಕ್ಕಳಿಗೆ ಶೌಚಾಲಯದ ಬಗ್ಗೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ನುರಿತ ತಜ್ಞರಿಂದ ಅರಿವು ಮೂಡಿಸುವ ಕಾರ್ಯವಾಗಬೇಕು. ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಮೂರು ತಾಲೂಕಿನಲ್ಲಿ ಬಹುತೇಕ ವಸತಿ ನಿಲಯದಲ್ಲಿ ನಿತ್ಯ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದಾರೆ. ಇಲ್ಲಿಯವರೆಗೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆಗಳು ಎದ್ದು ಕಂಡಲ್ಲಿ ನಾವೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ತಾಲೂಕುಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಅದರಲ್ಲಿ ಕೆಲವು ಆಡಳಿತಾತ್ಮಕ ತೊಂದರೆಗಳಿದ್ದರೆ ಅವುಗಳನ್ನು ಹೊರತುಪಡಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತಾಗಬೇಕು ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು. ಅಹವಾಲು ಸ್ವೀಕಾರ:

ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳ ಕುರಿತಾಗಿ ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಿಂದಗಿ ಪುರಸಭೆಯಲ್ಲಿ ಅತ್ಯಂತ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಹಿಂದೆ ನಕಲಿ ಸಹಿ ಮತ್ತು ನಕಲಿ ಸೀಲ್‌ಗಳನ್ನು ತಯಾರಿಸಿ ಅವ್ಯವಹಾರ ಮಾಡಲಾಗಿದೆ. ಈ ಕುರಿತು ಸೂಕ್ತ ತನಿಖೆವಾಗಬೇಕು, ವಕ್ಫ್‌ ಆಸ್ತಿ ಒತ್ತುವರಿಯಾಗಿದ್ದು, ಹೊಲಕ್ಕೆ ರಸ್ತೆ ಇಲ್ಲದಿರುವುದು, ಪುರಸಭೆಯಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಸರಿಯಾಗಿ ರೀತಿಯಲ್ಲಿ ಮನೆಗಳು ಫಲಾನುಭವಿಗಳಿಗೆ ಹಂಚಿಕೆಯಾಗದಿರುವುದು, ಬಿಸಿಯೂಟದ ಸಮಸ್ಯೆ ಸೇರಿದಂತೆ ಸುಮಾರು 20 ಸಮಸ್ಯೆಗಳನ್ನು ಆಲಿಸಿದರು.

ಅದರಲ್ಲಿ ಸುಮಾರು 5 ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಮಾತನಾಡಿ, ಸಾರ್ವಜನಿಕರಿಗಾಗಿ ನಾವು ದುಡಿಯುತ್ತೇವೆ. ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಸರಿಯಲ್ಲ. ಗಂಭೀರ ಪ್ರಕರಣಗಳಿದ್ದರೆ ಅವುಗಳಿಗೆ ಸಮಯ ನೀಡಿ ಪರಿಹಾರ ನೀಡಲು ಮುಂದಾಗಬೇಕು. ಜನ ಸೇವೆಯೇ ಜನಾರ್ಧನ ಸೇವೆ ಎಂಬ ಭಾವದಿಂದ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ವೇದಿಕೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಸುರೇಶರೆಡ್ಡಿ, ತಹಸೀಲ್ದಾರ್‌ ಪ್ರದೀಪಕುಮಾರ ಹಿರೇಮಠ, ತಾಪಂ ಇಒ ರಾಮು ಅಗ್ನಿ, ಲೋಕಾಯುಕ್ತ ಸಿಪಿಐ ಆನಂದ ಡೋಣಿ ಮುಂತಾದವರು ಹಾಜರಿದ್ದರು. ಸಭೆಯಲ್ಲಿ ತಾಲೂಕಿನ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

-------

ಕೋಟ್‌

ಸಾರ್ವಜನಿಕರಿಗಾಗಿ ನಾವು ದುಡಿಯುತ್ತೇವೆ. ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಸರಿಯಲ್ಲ. ಗಂಭೀರ ಪ್ರಕರಣಗಳಿದ್ದರೆ ಅವುಗಳಿಗೆ ಸಮಯ ನೀಡಿ ಪರಿಹಾರಕ್ಕೆ ಮುಂದಾಗಬೇಕು. ಜನ ಸೇವೆಯೇ ಜನಾರ್ಧನನ ಸೇವೆ ಎಂಬ ಭಾವದಿಂದ ಅಧಿಕಾರಿಗಳು ಕೆಲಸ ಮಾಡಬೇಕು.

- ಟಿ.ಮಲ್ಲೇಶ, ಲೋಕಾಯುಕ್ತ ಎಸ್ಪಿ