ಆಡಳಿತದಲ್ಲಿ ಕನ್ನಡ ಅನುಷ್ಠಾನ ಆಗದಿದ್ರೆ ಅಧಿಕಾರಿಗಳೇ ಹೊಣೆ: ಡಾ. ಪುರುಷೋತ್ತಮ ಬಿಳಿಮಲೆ

| Published : Jul 23 2025, 03:28 AM IST

ಆಡಳಿತದಲ್ಲಿ ಕನ್ನಡ ಅನುಷ್ಠಾನ ಆಗದಿದ್ರೆ ಅಧಿಕಾರಿಗಳೇ ಹೊಣೆ: ಡಾ. ಪುರುಷೋತ್ತಮ ಬಿಳಿಮಲೆ
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲೆಯ ಅಡಳಿತದಲ್ಲಿ ಕನ್ನಡ ಭಾಷೆಯು ಶೇ 100 ರಷ್ಟು ಅನುಷ್ಠಾನವಾಗಬೇಕು. ಅನುಷ್ಠಾನ ಮಾಡದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶಿಕ್ಷಣ ಅಥವಾ ಉದ್ಯೋಗ ಅರಸಿ ಬಂದ ಹೊರರಾಜ್ಯದ ಕನ್ನಡಯೇತರಿಗೆ ಕನ್ನಡ ಕಲಿಯಲು ಉತ್ಸಾಹಕರಾಗಿದ್ದರೆ 20 ಜನ ಮೇಲ್ಪಟ್ಟಿದ್ದಲ್ಲಿ ಕನ್ನಡ ಪ್ರಾಧಿಕಾರದ ವತಿಯಿಂದ ಕಲಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಆಸ್ಪತ್ರೆಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಗಳು ಅದಷ್ಟು ಕನ್ನಡದಲ್ಲಿಯೇ ಇರುವ ಹಾಗೆ ಕ್ರಮ ವಹಿಸಬೇಕು. ಕಡ್ಡಾಯವಾಗಿ ರೋಗಿಗಳ ಹೆಸರನ್ನು ಕನ್ನಡದಲ್ಲಿಯೇ ನಮೂದು ಮಾಡಬೇಕು. ವೈದ್ಯರು ಸಹ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳುಬೇಕು ಎಂದರು.

ಕಾರ್ಯಪಾಲಕ ಅಭಿಯಂತರರ ಕಚೇರಿಯಿಂದ ಅಬಿವೃದ್ಧಿ ಕಾಮಗಾರಿಗಳ ಟೆಂಡರ್, ನೋಟಿಫಿಕೇಶನ್ ಗಳನ್ನು ಕನ್ನಡದಲ್ಲಿಯೆ ಕರೆಯುವುದರೊಂದಿಗೆ ಕಾರ್ಯಾದೇಶವನ್ನು ಕನ್ನಡ ಭಾಷೆಯಲ್ಲಿಯೇ ನೀಡಬೇಕು. ಮುಂದಿನ ದಿನಗಳಲ್ಲಿ ಕನ್ನಡಿಗರಿಗೆ ಟೆಂಡರ್ ಕಾರ್ಯಾದೇಶವನ್ನು ನೀಡಿದ್ದಲ್ಲಿ ಅವರು ಸ್ಥಳೀಯ ಕನ್ನಡಿಗರಿಗೆ ಉದ್ಯೊಗ ಅವಕಾಶಗಳು ಹೆಚ್ಚು ಇರುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದರು.

ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಸ್ಥಳೀಯ ಭಾಷೆಯನ್ನು ಮಾತನಾಡುವವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳುವುದು ಒಳಿತು. ಇದರಿಂದ ಸ್ಥಳೀಯ ಜನರು ದೈನಂದಿನ ಬ್ಯಾಂಕಿಂಗ್ ವ್ಯವಹಾರಗಳನ್ನು ಸರಳವಾಗಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಜಿಲ್ಲೆಯ ಅಗ್ರಗಣ್ಯ ಬ್ಯಾಂಕ್ ಸಭೆಯನ್ನು ನಡೆಸಿ, ಬ್ಯಾಂಕುಗಳಿಗೆ ಸೂಚನೆ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನ್ಗಲ್, ಸದಸ್ಯರಾದ ಯಾಕೂಬ್ ಖಾದರ್ ಗುಲ್ವಾಡಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಅಪ್ತಕಾರ್ಯದರ್ಶಿ ಫಣಿ ಕುಮಾರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ವಾಪಾಸ್

ಜಿಲ್ಲಾಡಳಿತವು ಕನ್ನಡ ಪರ ಸಂಘಟನೆಗಳೊಂದಿಗೆ ಕನಿಷ್ಠ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಕನ್ನಡ ಭಾಷಾ ಅನುಷ್ಠಾನದ ಸಮಸ್ಯೆಗಳ ಕುರಿತು ಚರ್ಚಿಸಿ, ಕಾನೂನಾತ್ಮಕವಾಗಿ ಅನುಷ್ಠಾನಕ್ಕೆ ಒತ್ತು ನೀಡಬೇಕು, ಕನ್ನಡ ಭಾಷೆಯ ಪರ ಕಾನೂನಾತ್ಮಕವಾಗಿ ಹೋರಾಟ ನಡೆಸಿದ ಕನ್ನಡಪರ ಹೋರಾಟ ಸಂಘಟನೆಗಳ ಸದಸ್ಯರುಗಳ ಮೇಲೆ ಹಾಕಿರುವ ಪ್ರಕರಣಗಳನ್ನು ಸರ್ಕಾರ ವಾಪಾಸು ಪಡೆಯಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದರು.