ಗಾಂಜಾ ಬೆಳೆದರೆ ಕ್ರಮ ಜರುಗಿಸಿ

| Published : Nov 07 2025, 02:30 AM IST

ಸಾರಾಂಶ

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯ ನಿರ್ವಹಿಸಬೇಕು.

ಕೊಪ್ಪಳ: ಜಿಲ್ಲೆಯ ಅರಣ್ಯ ಪ್ರದೇಶ ಮತ್ತು ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯ ನಿರ್ವಹಿಸಬೇಕು. ಮಾದಕ ವಸ್ತುಗಳ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ನಿಷೇಧ ಕುರಿತು ಜಾಗೃತಿ ಮೂಡಿಸಲು ಸಮಿತಿ ರಚಿಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸೀಜನ್ ಆಗಿರುವುದರಿಂದ ಆನೆಗೊಂದಿ ಭಾಗದಲ್ಲಿರುವ ಎಲ್ಲ ಹೋಂಸ್ಟೆ, ರೆಸಾರ್ಟ್, ಡಾಭಾ, ಹೋಟೆಲ್, ಪಾನಬೀಡಾ ಅಂಗಡಿಗಳಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಪರಿಶೀಲನೆ ನಡೆಸುವುದರ ಜತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯದಂತೆ ನೋಡಿಕೊಳ್ಳವುದರ ಜತೆಗೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಬೇಕು. ಈ ಕೆಲಸ ವಿಶೇಷವಾಗಿ ವೀಕೆಂಡನಲ್ಲಿ ಮಾಡಬೇಕೆಂದು ಹೇಳಿದರು.

ಎಸ್ಪಿ ಡಾ.ರಾಮ್ ಎಲ್. ಅರಸಿದ್ದಿ ಮಾತನಾಡಿ, ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ಕಂಡು ಬಂದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದ್ದೇನೆ. ಕೂಕನಪಳ್ಳಿ ಸಂತೆಯ ದಿನ ಜನರು ರಸ್ತೆಯ ಮೇಲೆ ಕುಳಿತು ಮದ್ಯ ಮಾರಾಟ ಮಾಡುತ್ತಾರೆ ಎನ್ನುವ ದೂರುಗಳಿಗೆ ತಕ್ಷಣ ಅದನ್ನು ನಿಲ್ಲಿಸಬೇಕೆಂದು ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್ ಸೇರಿದಂತೆ ಸಹಾಯಕ ಔಷಧ ನಿಯಂತ್ರಣಾಧಿಕಾರಿಗಳು, ಅಬಕಾರಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.