ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಶುಭ ಕಲ್ಯಾಣ್ ಸೂಚಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಒಟ್ಟು 41 ಅಪಘಾತ ಸ್ಥಳಗಳನ್ನು ಗುರುತಿಸಲಾಗಿದೆ. ಅಪಘಾತ ಸ್ಥಳಗಳಲ್ಲಿ ಎಚ್ಚರಿಕೆ, ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕ ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿ ಸಮರ್ಪಕ ರೀತಿಯಲ್ಲಿ ನಿರ್ವಹಿಸದ ಕಾರಣ ಹಾಗೂ ವಾಹನ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಯ ವಾಹನಗಳು ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಮಾರ್ಗವಾಗಿ ಹೋಗುವುದರಿಂದ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಸರ್ವಿಸ್ ರಸ್ತೆ ಮತ್ತು ಮಾರ್ಗ ಸೂಚಿಗಳನ್ನು ಅಳವಡಿಸಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.