ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದು ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಎಚ್ಚರಿಕೆ ನೀಡಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ೨೦೨೪ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ಸಭೆ ನಡೆಸಿ ಮಾತನಾಡಿ, ೨೦೨೪-೨೫ ನೇ ಸಾಲಿನ ಕಬ್ಬು ಅರೆಯುವಿಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ ಐದು ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿಬರುತ್ತಿವೆ. ಇಂತಹ ದೂರುಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದರು.
ಎಲ್ಲಾ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಬ್ಬು ಅರೆಯುವಿಕೆ ಪ್ರಕ್ರಿಯೆ ನಡೆಸಬೇಕು. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್‌ಆರ್‌ಪಿ ಪ್ರಕಾರವೇ ೧೪ ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸುವಂತೆ ಸೂಚಿಸಿದರು.ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸುವಂತೆ ಹೇಳಿದರು.
ಮೈಷುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಹೆಚ್.ಎಲ್.ನಾಗರಾಜು ಮಾತನಾಡಿ, ಮೈಷುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸೆಪ್ಟೆಂಬರ್ ಅಂತ್ಯದೊಳಗೆ ೨.೫೦ ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರೆದ ನಂತರ ಉಳಿದರೆ ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಐಸಿಎಲ್, ಚಾಂಷುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಕಟಾವು ಕಾರ್ಮಿಕರು ಒಟ್ಟು ೧೦೦ ಬ್ಯಾಚನ್ನು ೧೫ ದಿನಗಳ ಕಾಲ ಮೆಷುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣದ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಇತರರಿದ್ದರು.