ಸಾರಾಂಶ
ಕನ್ನಡಪ್ರಭ ವಾರ್ತೆ ಮಲ್ಪೆಸ್ವ-ಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳು ಮಾರುಕಟ್ಟೆ ಮಾಡುವುದೇ ಒಂದು ಸವಾಲಾಗಿರುತ್ತದೆ. ಅದನ್ನು ಎದುರಿಸಲು ತಾವು ಉತ್ಪಾದಿಸುವ ಉತ್ಪನ್ನಗಳೂ ಶುದ್ಧ ಹಾಗೂ ಗುಣಮಟ್ಟವನ್ನು ಹೊಂದಿರಬೇಕು. ಆಗ ಮಾತ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಮತ್ತು ಹೆಚ್ಚಿನ ಲಾಭ ಗಳಿಸಲು ಸಾಧ್ಯ. ಆದ್ದರಿಂದ ಗುಣಮಟ್ಟ ಕಾಪಾಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಬುಧವಾರ ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ನಡೆದ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.ಉತ್ಪನ್ನಗಳ ಗುಣಮಟ್ಟ ಚೆನ್ನಾಗಿದ್ದಲ್ಲಿ ಆನ್‌ಲೈನ್ ಮೂಲಕ ಗ್ರಾಹಕರನ್ನು ಸೆಳೆಯಲು ಸಾಧ್ಯ. 300ಕ್ಕೂ ಹೆಚ್ಚು ಸ್ವ-ಸಹಾಯ ಸಂಘದ ಸದಸ್ಯರು ಉತ್ಪಾದಿಸುವ ಜೀನಿ ಹಾಗೂ ದೇಸಿ ಎಂಬ ಹೆಸರಿನ ಆಹಾರೋತ್ಪನ್ನಗಳು ಮಾರುಕಟ್ಟೆಯಲ್ಲಿ ಕೋಟಿಗಟ್ಟಲೇ ವಹಿವಾಟು ನಡೆಸುತ್ತಿದೆ. ಅಲ್ಲದೇ ಆನ್‌ಲೈನ್ ಮೂಲಕವೂ ಸಹ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ ಎಂದವರು ಉದಾಹರಿಸಿದರು.
ಸರ್ಕಾರ ಹೆಣ್ಣುಮಕ್ಕಳು ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣುಮಕ್ಕಳು ಇದರ ಉಪಯೋಗ ಪಡೆದುಕೊಂಡು ಆರ್ಥೀಕರಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದರು.ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರು ತಯಾರಿಸಿದ ವಸ್ತುಗಳ ಮಾರಟ ಹಾಗೂ ಪ್ರದರ್ಶಕ್ಕಾಗಿ ಒಟ್ಟು 40 ಮಳಿಗೆಗಳನ್ನು ತೆರೆದಿದ್ದು, ಮಹಿಳೆಯರ ತಯಾರಿಸಿದ ವಸ್ತುಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ರೂಪಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ, ಉಡುಪಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಲತಾ ಅಶೋಕ್, ಕುಂದಾಪುರ ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯಾ ಗಾಣಿಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಯೋಜನಾ ನಿರ್ದೇಶಕ ಕರೀಂ ಅಸಾದಿ ಸ್ವಾಗತಿಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ನವ್ಯಾ ನಿರೂಪಿಸಿದರು. ತಾಲೂಕು ವ್ಯವಸ್ಥಾಪಕ ಪ್ರಶಾಂತ್ ವಂದಿಸಿದರು.ಮೇಳದಲ್ಲಿ ಹಲವು ವಸ್ತುಗಳು ಲಭ್ಯಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಪಾಸ್ಟ್ ಫುಡ್ ಇತ್ಯಾದಿ ಉತ್ಪನ್ನಗಳು ಲಭ್ಯವಿದ್ದು, ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.