ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ 2025ರ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಾಯಿ ಕಡಿತಕ್ಕೊಳಗಾಗದಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ನಿಯಮಿತವಾಗಿ ರೇಬಿಸ್ ನಿರೋಧಕ ಲಸಿಕೆ ಹಾಕಿಸಬೇಕು ಎಂದು ಹೇಳಿದರು.ಬೀದಿ ನಾಯಿಗಳಿಗೆ ಈಗಾಗಲೇ ಆಶ್ರಯ ಕೇಂದ್ರವನ್ನು ಬುರಣಾಪುರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ವಿವಿಧ ಬೀದಿ ನಾಯಿಗಳಿಗೆ ಈ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗುತ್ತಿದ್ದು, ಪಾಲಿಕೆ ಹಾಗೂ ಪಶು ವೈದ್ಯಕೀಯ ಇಲಾಖೆಗಳು ಜಂಟಿಯಾಗಿ ಈ ಕೇಂದ್ರ ನಿರ್ವಹಿಸಲಿದ್ದಾರೆ. ರೇಬಿಸ್ ರೋಗದ ಕುರಿತು ಗ್ರಾಮೀಣ, ನಗರ ಪ್ರದೇಶ ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದರು.
ಬೆಂಗಳೂರಿನ ಪಶುವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಯಲಗೋಡ ಮಾತನಾಡಿ. ವಿಶ್ವ ರೇಬಿಸ್ ದಿನ್ ಸೆ.28ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಕಳೆದ 18 ವರ್ಷಗಳಿಂದ ಈ ದಿನಾಚರಣೆ ಆಚರಿಸಲಾಗುತ್ತಿದೆ. 2030ರ ವರೆಗೆ ರೇಬಿಸ್ ಮುಕ್ತ ಮಾಡಲು ಈ ದಿಸೆಯಲ್ಲೂ ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಸಾಂಕ್ರಾಮಿಕ ವಿಭಾಗದ ಹಿರಿಯ ವಿಜ್ಞಾನಿ ಡಾ.ಗಂಗಾಧರ.ಎನ್.ಎಲ್. ಅವರು, ರೇಬಿಸ್ ಕುರಿತು ಉಪನ್ಯಾಸ ನೀಡಿದರು.ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಡಿಎಚ್‌ಓ ಡಾ.ಸಂಪತಕುಮಾರ ಗುಣಾರಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ವಿಠೋಬ ಆಸಂಗಿಹಾಳ, ಜಿಪಂ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಪಾಲಿಕೆ ಆರೋಗ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ, ಜಿಲ್ಲಾಸ್ಪತ್ರೆ ವೈದ್ಯ ಅಚ್ಯುತ್ ಪತ್ತಾರ, ವಿವಿಧ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.